ಮದ್ದೂರು: ಮೇಕೆದಾಟು ಯೋಜನೆ ಶೀಘ್ರದಲ್ಲಿ ಪ್ರಾರಂಭಿಸಿ ಕುಡಿಯುವ ನೀರು ಮತ್ತು ಬೇಸಾಯಕ್ಕೆ ಅನುಕೂಲ ಕಲ್ಪಿಸುವಂತೆ ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಪ್ರವಾಸಿ ಮಂದಿರದ ಬಳಿಯಿರುವ ಬೆಂಗಳೂರು ಮೈಸೂರು ಹೆದ್ದಾರಿಗೆ ಆಗಮಿಸಿದ ವೇದಿಕೆ ಕಾರ್ಯತರು ಹಾಗೂ ರೈತ ಸಂಘದ ಮುಖಂಡರು ಮೇಕೆದಾಟು ಯೋಜನೆ ಪ್ರಾರಂಭಿಸಲು ಮೀನಮೇಷ ಎಣಿಸುತ್ತಿರುವ ಸರ್ಕಾರಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲಕಾಲ ಹೆದ್ದಾರಿ ತಡೆದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ವೇದಿಕೆಯ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್ ಮಾತನಾಡಿ, ಮೇಕೆದಾಟು ಯೋಜನೆ ಜಾರಿ ಮಾಡದ ಕಾರಣ ಕೆಆರ್‌ಎಸ್ ನಿಂದ ಹೊರ ಬರುವ ಸಾವಿರಾರು ಕ್ಯೂಸೆಕ್ ನೀರು ವ್ಯರ್ಥವಾಗಿ ತಮಿಳುನಾಡಿಗೆ ಹರಿದು ಹೋಗುತ್ತಿದ್ದರೂ ಜನಪ್ರತಿನಿಧಿಗಳು ತಲೆ ಕೆಡಿಸಿಕೊಳ್ಳದಿರುವುದು ವಿಪರ್ಯಾಸದ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯೋಜನೆ ಪೂರ್ಣಗೊಳಿಸಿದರೆ ಸುಮಾರು 10 ಜಿಲ್ಲೆಯ ರೈತರಿಗೆ ಬೇಸಾಯಕ್ಕೆ ಹಾಗೂ ಜನರಿಗೆ ಕುಡಿಯುವ ನೀರಿಗೆ ಅನುಕೂಲವಾಗುತ್ತದೆ ಇದನ್ನು ಅರಿತು ಸರ್ಕಾರ ಯೋಜನೆ ಜಾರಿಗೆ ತರಲು ಮುಂದಾಗಬೇಕು. ಕೇಂದ್ರ ಸರ್ಕಾರ ಕೂಡ ಮಧ್ಯಸ್ಥಿಕೆ ವಹಿಸಿಕೊಳ್ಳಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ವೇದಿಕೆ ವತಿಯಿಂದ ರಾಜ್ಯವ್ಯಾಪಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಜಿ.ಎಸ್.ಪ್ರಭುಲಿಂಗು, ಮುಖಂಡರಾದ ಕೀಳಘಟ್ಟ ನಂಜುಂಡಯ್ಯ, ವೆಂಕಟೇಶ್, ಸೊ.ಸಿ.ಪ್ರಕಾಶ್, ಸೊಂಪುರ ಉಮೇಶ್, ನಾಗರಾಜು, ಚಿಕ್ಕಣ್ಣ, ವೀರಪ್ಪ, ಗಣೇಶ, ವಿಜೇಂದ್ರ ಕುಮಾರ್ ಸೇರಿದಂತೆ ಇತರರು ಇದ್ದರು.