ಜಿಲ್ಲೆ

ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲ

ಹುಬ್ಬಳ್ಳಿ : ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ. ಮಂಜುಳಾ ಆರೋಪಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿವೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ, ಅಂಜಲಿ ಅಂಬಿಗೇರ ಕೊಲೆ ನಡೆದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತ್ವರಿತ ನ್ಯಾಯಾಲಯ ರಚಿಸುವ ಭರವಸೆ ನೀಡಿದ್ದರು. ಆದರೆ, ವರ್ಷಗಳೇ ಗತಿಸಿದರೂ ತ್ವರಿತ ನ್ಯಾಯಾಲಯದ ಸ್ಥಾಪನೆ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳ ಅಧಿಕಾರದ ಅವಧಿ ಪೂರೈಸಿದ ಸಂಭ್ರಮಾಚರಣೆ ಆಚರಿಸುತ್ತಿದೆ. ಆದರೆ, ಈ ಸಂಭ್ರಮಾಚರಣೆ ಯಾವ ಪುರುಷಾರ್ಥಕ್ಕಾಗಿ ? 70 ಕ್ಕೂ ಹೆಚ್ಚು ಬಾಣಂತಿಯರು ಸಾವಿಗೀಡಾಗಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆದರೂ, ಸರ್ಕಾರ ಬಾಣಂತಿಯರ ಹೆಣದ ಮೇಲೆ ಸಂಭ್ರಮಾಚರಣೆ ಮಾಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆಗಳು ಸರಿಯಾಗಿ ಅನುಷ್ಠಾನಗೊಂಡಿಲ್ಲ. ಶಕ್ತಿ ಯೋಜನೆ ಮಹಿಳೆಯರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಮಹಿಳೆಯರನ್ನು ಉಚಿತವಾಗಿ ಬಸ್​ನಲ್ಲಿ ಹತ್ತಿಸಿಕೊಳ್ಳಬೇಕಾಗುತ್ತದೆ ಎಂಬ ಉದ್ದೇಶದಿಂದ ನಿಗದಿತ ನಿಲ್ದಾಣ ಬಿಟ್ಟು ಚಾಲಕರು ಬಸ್​ಗಳನ್ನು ದೂರದಲ್ಲಿ ನಿಲ್ಲಿಸುತ್ತಿದ್ದಾರೆ. ಹೀಗಾಗಿ, ವಿದ್ಯಾರ್ಥಿನಿಯರು, ಉದ್ಯೋಗಸ್ಥ ಮಹಿಳೆಯರು ನಿತ್ಯ ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು.

ಮಹಿಳೆಯರಿಗೆ ಗೃಹಲಕ್ಷಿ ್ಮ ಹಣ ಸಕಾಲಕ್ಕೆ ಬಿಡುಗಡೆ ಮಾಡದೇ ಅದೇ ಹಣವನ್ನು ಕಾಂಗ್ರೆಸ್ ಕಾರ್ಯಕರ್ತರ ದೈನಂದಿನ ವೆಚ್ಚ ನಿರ್ವಹಣೆಗೆ ಬಳಸಲಾಗುತ್ತಿದೆ. ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭೆ ಕ್ಷೇತ್ರದಲ್ಲಿ ಪುಂಡರ ಹಾವಳಿ ಹೆಚ್ಚಿದೆ. ಬಸ್ ನಿಲ್ದಾಣಗಳಲ್ಲಿ ಪುಂಡರು ಗುಂಪುಗಟ್ಟಿಕೊಂಡು ನಿಂತು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರಿಗೆ ಕೀಟಲೆ ಮಾಡುತ್ತಿದ್ದಾರೆ. ಪೊಲೀಸರು ಪುಂಡರ ಹಾವಳಿ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಮಹಾನಗರ ಜಿಲ್ಲಾ ಬಿಜೆಪಿ ವಕ್ತಾರ ರವಿ ನಾಯಕ, ಪಾಲಿಕೆ ಸದಸ್ಯೆ ರೂಪಾ ಶೆಟ್ಟಿ, ಅಕ್ಕಮಹಾದೇವಿ ಹೆಗಡೆ, ಅನುರಾಧ ಚಿಲ್ಲಾಳ ಹಾಗೂ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.