ಮೈಸೂರು: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕಿತ್ತುಹಾಕಿ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುತ್ತೇವೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಶೈಕ್ಷಣಿಕ ವಿಚಾರದಲ್ಲಿ ರಾಜ್ಯ ಸರ್ಕಾರ ತುಘಲಕ್ ಆಡಳಿತ ನಡೆಸುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರ ರೂಪಿಸಿದ ಪಠ್ಯ ಪುಸ್ತಕವನ್ನು ಕಾಂಗ್ರೆಸ್ ಅಧಿಕಾ ರಕ್ಕೆ ಬಂದ ಕೂಡಲೇ ಬದಲಾಯಿಸಿತು. ಆ ಮೂಲಕ ಶೈಕ್ಷಣಿಕ ಅರಾಜಕತೆಗೆ ಅಡಿಪಾಯ ಹಾಕಿದರು. ಶಿಕ್ಷಣದ ವಿಚಾರದಲ್ಲಿ ರಾಜ್ಯ ಸರ್ಕಾರ ಅರಾಜಕತೆ ಸೃಷ್ಟಿಸುತ್ತಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ. ಈ ಎನ್‌ಇಪಿ ರದ್ದುಗೊಳಿಸಿರುವುದು ರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಸೀಮಿತವೇ ಅಥವಾ ಖಾಸಗಿ ಶಿಕ್ಷಣ ಸಂಸ್ಥೆಗೂ ಅನ್ವಯ ಆಗಲಿದೆಯೇ ಎಂಬುದನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿ ಸಬೇಕು. 4 ವರ್ಷದ ಪದವಿ ಪೂರೈಸುವ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪೂರೈಸದೆ ನೇರವಾಗಿ ನೆಟ್ ಪರೀಕ್ಷೆ ಎದುರಿಸಬಹುದು ಎಂದು ಯುಜಿಸಿ ಆದೇಶ ಹೊರಡಿಸಿದೆ. ಅಲ್ಲದೆ, ಪಿಎಚ್‌ಡಿ ಪದವಿಗೆ ನೋಂದಾಯಿಸಲು ಅವಕಾಶ ನೀಡಲಾಗಿದೆ. ಈ ಸೌಲಭ್ಯದಿಂದ ರಾಜ್ಯ ಮಕ್ಕಳು ವಂಚಿತರಾಗಲಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ನಡೆಯಿಂದ ಅನ್ಯಾಯವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ 5, 8, 9ನೇ ತರಗತಿಗಳ ಪರೀಕ್ಷೆ ನಡೆಸುವ ವಿಚಾರದಲ್ಲಿ ಅನಗತ್ಯವಾಗಿ ಗೊಂದಲ ಸೃಷ್ಟಿಸಿತು. ಪರೀಕ್ಷೆ ವಿಚಾರ ನ್ಯಾಯಾಲಯದ ಮೆಟ್ಟಿಲೇರುವಂತಾಯಿತು. ಇಂದಿಗೂ ಪರೀಕ್ಷಾ ಫಲಿತಾಂಶ ಕೊಡಲು ಸಾಧ್ಯವಾಗಿಲ್ಲ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣಕ್ಕೂ ಸಂಬಂಧವೇ ಇಲ್ಲದಂತಾಗಿದೆ ಎಂದು ವ್ಯಂಗ್ಯವಾಡಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತ ಕಾಣಲು ರಾಜ್ಯ ಸರ್ಕಾರ ಕಾರಣ. ಈ ಬಾರಿ ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಭಯ ಎದುರಿಸಿ ಅನುತ್ತೀರ್ಣಗೊಂಡರು. ಸಿಸಿ ಕ್ಯಾಮರಾ ಅಳವಡಿಕೆಯಿಂದ ಫಲಿತಾಂಶ ಕುಸಿದಿರುವ ಹೊಣೆಯನ್ನು ರಾಜ್ಯ ಸರ್ಕಾರ ಹೊತ್ತುಕೊಳ್ಳಬೇಕು. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಅನ್ಯಾಯವಾಗಿರುವ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಮಾಡಬೇಕು ಎಂದು ಆಗ್ರಹಿಸಿದರು.
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಯಾರು ಸ್ಪರ್ಧಿಸುತ್ತಾರೆ ಎಂಬುದನ್ನು ಪಕ್ಷದ ಹಿರಿಯ ನಾಯಕರು ಸ್ಪಷ್ಟಪಡಿಸುತ್ತಾರೆ. ಬಿಜೆಪಿ ಹಾಗೂ ಜೆಡಿಎಸ್ ಅನ್ನುವುದಕ್ಕಿಂತ ಎನ್‌ಡಿಎ ಅಭ್ಯರ್ಥಿ ಸ್ಪರ್ಧಿಸುತ್ತಾರೆ. ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದ್ದರೂ ಪಕ್ಷ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಎಲ್ಲವೂ ಅವಲಂಬಿತವಾಗಿದೆ, ಎಲ್ಲವೂ ಸುಖಾಂತ್ಯ ಕಾಣಲಿದೆ ಎಂಬ ವಿಶ್ವಾಸವಿದೆ. ಯಾರೇ ಅಭ್ಯರ್ಥಿಯಾದರೂ ನಮ್ಮ ಬೆಂಬಲ ಇರಲಿದೆ. ಪಕ್ಷದ ವರಿಷ್ಠರು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.