ಜಿಲ್ಲೆ

ಕಾಯ್ದೆ ತಿದ್ದುಪಡಿ ವಿರೋಧಿಸಿ ಹಂತ ಹಂತವಾಗಿ ಪ್ರತಿಭಟನೆ

Mysuru

ಮೈಸೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ರೈತ ಸಂಘದಿಂದ ಹಂತ ಹಂತವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ತಾವು ಬೆಳೆದ ಬೆಳೆಗೆ ಸರಿಯಾಗಿ ಬೆಲೆ ಸಿಗುತ್ತಿಲ್ಲ ಎಂದು ರೈತರು ಈಗಾಗಲೇ ಕಣ್ಣೀರು ಸುರಿಸುತ್ತಿದ್ದಾರೆ. ಈಗ ಲಾಕ್‌ಡೌನ್‌ನಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸನ್ನಿವೇಶದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿರಲಿಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಸರ್ಕಾರ ಕೃಷಿಯನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದರಿಂದ ಕೇವಲ ರೈತರಿಗಷ್ಟೇ ಅಲ್ಲದೆ ಲಕ್ಷಾಂತರ ಕಾರ್ಮಿಕರು, ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳಿಗೂ ತೊಂದರೆ ಆಗಲಿದೆ ಎಂದು ಎಚ್ಚರಿಸಿದರು.
ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸುಗ್ರೀವಾಜ್ಞೆ ಹೊರಡಿಸಿದ್ದಾರೆ. ಈ ಕಾಯ್ದೆ ತಿದ್ದುಪಡಿ ಕುರಿತು ಬಿಜೆಪಿ ವಲಯದಲ್ಲಿಯೇ ಅಪಸ್ವರ ಕೇಳಿಬರುತ್ತಿದೆ. ಕೆಲ ರಾಜ್ಯ ಸರ್ಕಾರಗಳು ಜನರಿಗೆ ತೊಂದರೆಯಾಗುವ ಈ ಕಾಯ್ದೆಯನ್ನು ಜಾರಿ ಮಾಡುವುದಿಲ್ಲ ಎಂದು ಹೇಳಿವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಈ ಕಾಯ್ದೆ ತಿದ್ದುಪಡಿಯಾಗುತ್ತದೆ ಎಂದು ಆರೋಪಿಸಿದರು.

ಸರ್ಕಾರ ಜಾರಿಗೊಳಿಸಿರುವ ಎಪಿಎಂಸಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಹಾಗೂ ಬೀಜ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಲಾಗುತ್ತಿದ್ದು, ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.

ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ರೈತರು, ಕೂಲಿ ಕಾರ್ಮಿಕರು ಹಾಗೂ ಗ್ರಾಮೀಣ ಕಸುಬುದಾರರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿ ಮೊದಲ ಹಂತವಾಗಿ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಮೇ 27 ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಜೂನ್ 10ರ ನಂತರ ಖಾಸಗೀಕರಣ ವಿರೋಧಿಸಿ ಎಲ್ಲೆಡೆ ಚಳವಳಿ ರೂಪಿಸಲಾಗುವುದು ಎಂದು ಹೇಳಿದರು.

ರೈತ ಮುಖಂಡರಾದ ಎಂ.ಎಸ್. ಅಶ್ವಥನಾರಾಯಣರಾಜೇ ಅರಸ್, ಹೊಸಕೋಟೆ ಬಸವರಾಜು, ನೇತ್ರಾವತಿ, ಮರಂಕಯ್ಯ ಇತರರು ಇದ್ದರು.