ಜಿಲ್ಲೆ

ಬಾಲ್ಯವಿವಾಹ ಪದ್ಧತಿ ನಿಷೇಧ ಕಾಯ್ದೆ ಪರಿಣಾಮಕಾರಿ ಅನುಷ್ಠಾನ

ಗೋಪಾಲಕೃಷ್ಣ ಪಾದೂರ್

ಉಡುಪಿ: ಸಾಮಾಜಿಕ ಪಿಡುಗು ಬಾಲ್ಯವಿವಾಹ ಪದ್ಧತಿಯನ್ನು ನಿಮೂರ್ಲನೆ ಮಾಡಲು ಜಾರಿಗೊಳಿಸಲಾದ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದು ಪ್ರತಿಯೊಬ್ಬ ಅಧಿಕಾರಿ ಜವಾಬ್ದಾರಿ ಎಂದು ಉಪಪೊಲೀಸ್​ ಅಧೀಕ್ಷಕ ಪ್ರಭು ಡಿ.ಟಿ. ಹೇಳಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಡಾ.ವಿ.ಎಸ್​. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್​ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಬಾಲ್ಯವಿವಾಹ ನಿಷೇಧ ಹಾಗೂ ಮಕ್ಕಳ ಸಂಬಂಧಿತ ಕಾನೂನು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ವಯಸ್ಸಾದ ಹಿರಿಯರು ಮೊಮ್ಮಕ್ಕಳ ವಿವಾಹವನ್ನು ನೋಡಬೇಕೆಂಬ ಆಸೆ, ಆರ್ಥಿಕ ಮುಗ್ಗಟ್ಟು ಸೇರಿದಂತೆ ಮತ್ತಿತರ ಕಾರಣಗಳಿಂದಾಗಿ ಆಸೆ-ಆಮಿಷಗಳಿಗೆ ಒಳಗಾಗಿ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಬಾಲ್ಯ ವಿವಾಹ ಮಾಡಲು ಮುಂದಾಗುತ್ತಿದ್ದರು. ನಾಗರಿಕತೆ ಬೆಳೆದಂತೆ, ಶಿಕ್ಷಣ ಪಡೆಯುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಪ್ರಸ್ತುತ ಬಾಲ್ಯ ವಿವಾಹದಂತಹ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಆದರೆ ಸಮಾಜದಲ್ಲಿ ಸಂಪೂರ್ಣ ನಿರ್ಣಾಮವಾಗಿಲ್ಲ ಎಂದರು.

ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದುರ್ಬಲರ ಹಾಗೂ ಅಶಕ್ತರ ರಕ್ಷಣೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಸಮಾಜದಲ್ಲಿ ಇಂದಿಗೂ ಸಹ ಲಿಂಗಾನುಪಾತದಲ್ಲಿ ವ್ಯತ್ಯಾಸ ಕಂಡುಬರುತ್ತಿದ್ದು, ಗಂಡು ಮಕ್ಕಳಿಗೆ ಹೋಲಿಸಿದ್ದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ ಇದೆ. ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಬಾಲ್ಯ ವಿವಾಹ ಮಾಡಿದ್ದಲ್ಲಿ ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂದರು.

ಇದೇ ಸಂದರ್ಭದಲ್ಲಿ ಬದಲಾವಣೆಗೊಂಡ ನೂತನ ಚೈಲ್ಡ್​ಲೈನ್​ ಲೋಗೋ ಹಾಗೂ ಮಿಷನ್​ ವಾತ್ಸಲ್ಯ ಮಾರ್ಗಸೂಚಿ ಅನ್ವಯ ಮಕ್ಕಳ ಸುರಕ್ಷಿತ ಸ್ಪರ್ಶ ಹಾಗೂ ಅಸುರಕ್ಷಿತ ಸ್ಪರ್ಶ ಕುರಿತ ಪೋಸ್ಟರ್ಸ್​ಗಳನ್ನು ಬಿಡುಗಡೆಗೊಳಿಸಲಾಯಿತು. ಯುನಿಸೆಫ್​ ಪ್ರಾದೇಶಿಕ ಸಂಯೋಜಕ ಡಾ. ಕೊಣಿಲ ರಾಘವೇಂದ್ರ ಹಾಗೂ ಹರೀಶ್​ ಜೋಗಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಜಿಪಂ ಉಪ ಕಾರ್ಯದರ್ಶಿ ಎಸ್​.ಎಸ್​. ಖಾದರಳ್ಳಿ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಜೂಹಿ ದಾಮೋದರ್​, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್​ ಸ್ವಾಗತಿಸಿ, ಸುರಕ್ಷಾ ನಿರೂಪಿಸಿ, ವಂದಿಸಿದರು.