ಜಿಲ್ಲೆ

ಬೆಟ್ಟದ ನಂದಿ ಮಾರ್ಗದ ಅವೈಜ್ಞಾನಿಕ ಕಾಮಗಾರಿ ಸ್ಥಗಿತಗೊಳಿಸಿ : ಮಾಜಿ ಮೇಯರ್ ಬಿ.ಎಲ್. ಭೈರಪ್ಪ ಆಗ್ರಹ

ಮೈಸೂರು: ಚಾಮುಂಡಿಬೆಟ್ಟದ ನಂದಿ ಮಾರ್ಗದಲ್ಲಿ ನಡೆಯುತ್ತಿರುವ ರಸ್ತೆ ದುರಸ್ತಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಮಾಜಿ ಮೇಯರ್ ಬಿ.ಎಲ್. ಭೈರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ನಂದಿ ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಒಂದು ಕಿ.ಮೀ.ವರೆಗೆ ರಸ್ತೆ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿ ನಡೆಯುತ್ತಿರುವ ಜಾಗದಲ್ಲಿ 20 ಅಡಿ ಆಳದಷ್ಟು ಮಣ್ಣು ತೆಗೆಯಲಾಗಿದೆ. ಇದರಿಂದ ಕಾಮಗಾರಿ ನಡೆಯುತ್ತಿರುವ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೆ ಭೂ ಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಕಳವಳ ವ್ಯಕ್ತಪಡಿಸಿದರು.

ಕಾಮಗಾರಿಗೆ ಅಗತ್ಯವಿರುವ ಸಾಮಗ್ರಿಗಳನ್ನು ಪೂರೈಸಲು ಬಾರಿ ವಾಹನ ಓಡಾಟ ಆರಂಭವಾಗಿದೆ. ಇದರಿಂದಲೇ ಕುಸಿತ ಹೆಚ್ಚಾಗುವ ಸಾಧ್ಯತೆ ಇದೆ. ಕಾಮಗಾರಿ ನೆಪದಲ್ಲಿ ರಸ್ತೆ ಮತ್ತಷ್ಟು ಹಾನಿಗೊಳಗಾಗುತ್ತಿದೆ. ಹೀಗಾಗಿ ಪ್ರಸ್ತುತ ನಡೆಸುತ್ತಿರುವ ಕಾಮಗಾರಿಯನ್ನು ಸ್ಥಗಿತಗೊಳಿಸಿ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಚಾಮುಂಡಿ ಬೆಟ್ಟ ಉಳಿಸಿ ಹೋರಾಟ ಸಮಿತಿ ಸದಸ್ಯರಾದ ಪ್ರಭಾ ನಂದೀಶ್, ಪರುಶುರಾಮೇಗೌಡ, ಗಂಟಯ್ಯ, ಕಾಳೇಗೌಡ ನಾಗವಾರ ಇದ್ದರು.