ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಹಕಾರ ಸಂಘಗಳು ಉತ್ತಮವಾಗಿದ್ದು, ಸಹಕಾರ ಸಂಘಗಳನ್ನು ಮತ್ತಷ್ಟು ಬಲಪಡಿಸಲು ಮುಂದಾಗಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಕರ್ನಾಟಕ ಇನ್ಸ್‌ಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ೬೯ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನಿಂದ ಆಯ್ಕೆಗೊಂಡ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
ಸಹಕಾರ ಸಂಘಗಳು ಬಲಯುತವಾಗಿದ್ದಲ್ಲಿ ಕೃಷಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಹಿಂದಿನಿಂದ ಉಳಿಸಿಕೊಂಡು ಬಂದಿರುವ ಸಹಕಾರ ಸಂಘಗಳನ್ನು ಮತ್ತಷ್ಟು ಬಲಯುತಗೊಳಿಸುವಲ್ಲಿ ಶ್ರಮಿಸಬೇಕಿದೆ. ರೈತರಿಗೆ ಸಕಾಲದಲ್ಲಿ ಸಾಲವನ್ನು ನೀಡಿ ಕೃಷಿಕರ ಬದುಕನ್ನು ಹಸನು ಮಾಡುವಲ್ಲಿ ಸಹಕಾರ ಕ್ಷೇತ್ರದ ಪಾತ್ರ ಮಹತ್ತರವಾಗಿದೆ ಎಂದರು.
ಕೊಡಗು ಜಿಲ್ಲೆಯಲ್ಲಿ ಶೇ.೯೦ ಕ್ಕಿಂತ ಹೆಚ್ಚು ಸಹಕಾರ ಸಂಘಗಳು ಲಾಭದಾಯಕವಾಗಿ ನಡೆಯುತ್ತಿದೆ. ಅದನ್ನು ಉಳಿಸಿಕೊಂಡು ಹೋಗಬೇಕು. ಸಹಕಾರ ಸಂಘಗಳನ್ನು ಕಟ್ಟಿದ ಹಿಂದಿನ ಮಹಾನ್ ಸಹಕಾರಿಗಳನ್ನು ಸದಾ ಸ್ಮರಿಸಬೇಕು. ರೈತರಿಗೆ ಅನುಕೂಲ ಆಗಬೇಕು ಎಂದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕ ಎ.ಕೆ.ಮನುಮುತ್ತಪ್ಪ ಮಾತನಾಡಿ, ಸಹಕಾರ, ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಪಂದ್ಯಂಡ ಬೆಳ್ಯಪ್ಪರವರು ಅಪಾರ ಕೊಡುಗೆ ನೀಡಿದ್ದಾರೆ. ಸಾರ್ವಜನಿಕರ ಮನವಿಯಂತೆ ಪಂದ್ಯಂಡ ಬೆಳ್ಯಪ್ಪರವರ ಪ್ರತಿಮೆ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು ಎಂದ ಅವರು, ಕೊಡಗು ಜಿಲ್ಲೆಯಲ್ಲಿ ಸಹಕಾರ ಸಂಘಗಳನ್ನು ಮತ್ತಷ್ಟು ಬಲಪಡಿಸುವಲ್ಲಿ ಸಹಕಾರಿಗಳೆಲ್ಲರೂ ಕೈಜೋಡಿಸಬೇಕಿದೆ ಎಂದು ಮನವಿ ಮಾಡಿದರು.
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕ ಬಿ.ಡಿ.ಮಂಜುನಾಥ್ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ವೃತ್ತಿಪರತೆ ಇರಬೇಕು. ಕೊಡಗು ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರಕ್ಕೆ ಹಿಂದಿನ ಸಹಕಾರಿಗಳು ಭದ್ರ ಬುನಾದಿ ಹಾಕಿದ್ದಾರೆ. ಆ ನಿಟ್ಟಿನಲ್ಲಿ ಸಹಕಾರ ಸಂಘಗಳನ್ನು ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯಿಂದ ನಡೆಸಬೇಕು. ಸಂಘವನ್ನು ಕಟ್ಟುವಲ್ಲಿ ಸಹಕಾರಿಗಳು ಕೈಜೋಡಿಸಬೇಕು ಎಂದರು.
ಕೊಡಗು ಸಹಕಾರ ರತ್ನ ಪ್ರಶಸ್ತಿಯನ್ನು ಅಪ್ಪಚೆಟ್ಟೋಳಂಡ ಕೆ.ಮನುಮುತ್ತಪ್ಪರವರಿಗೆ, ಶ್ರೇಷ್ಠ ಸಹಕಾರಿ ಪ್ರಶಸ್ತಿಯನ್ನು ಬೊಟ್ಟೋಳಂಡ ಡಿ.ಬಿದ್ದಯ್ಯ, ಕೊಂಗಂಡ ಎಂ.ಗಣಪತಿ, ಕೆ.ವಿ.ಮಂಜುನಾಥ್ ಹಾಗೂ ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿಯನ್ನು ಕಮಲ ಕರಿಯಪ್ಪರವರಿಗೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ಉಪಾಧ್ಯಕ್ಷ ಪಿ.ಸಿ.ಮನು ರಾಮಚಂದ್ರ, ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳದ ನಿರ್ದೇಶಕರು ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ನಿರ್ದೇಶಕರು, ಸಹಕಾರ ಸಂಘಗಳ ಉಪನಿಬಂಧಕ ಕೃಷ್ಣಪ್ರಸಾದ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಮೋಹನ್, ಕೆಐಸಿಎಂನ ನಿವೃತ್ತ ಪ್ರಾಂಶುಪಾಲೆ ಎಂ.ಎಂ.ಶ್ಯಾಮಲ ಇತರರು ಇದ್ದರು.