ಕೋಲಾರ : ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ಎ ಮತ್ತು ಬಿ ವೃಂದಕ್ಕಾಗಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ನಕಲುಮುಕ್ತವಾಗಿ ನಡೆಸಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಅಕ್ರಂಪಾಷಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗೆಜೆಟೆಡ್ ಪ್ರೊಬೆಷನರಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಆ.27ರಂದು ಜಿಲ್ಲೆಯಲ್ಲಿ ಒಟ್ಟು 12 ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಸುಮಾರು 4,422 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಎಲ್ಲ ಅಭ್ಯರ್ಥಿಗಳನ್ನು ಫ್ರಿಸ್ಕ್ರೀನಿಂಗ್ಗೆ ಒಳಪಡಿಸಲಾಗುವುದು. ಅಭ್ಯರ್ಥಿಗಳಿಗೆ ಕುಡಿಯುವ ನೀರು, ಬೆಂಚ್, ಮಧ್ಯಾಹ್ನ ಬಿಸಿಯೂಟ, ಸಾರಿಗೆ ವ್ಯವಸ್ಥೆ ಹಾಗೂ ವೈದ್ಯಕಿಯ ಸೌಲಭ್ಯ ಒದಗಿಸುವಂತೆ ಸೂಚಿಸಿದರು.
ಪರೀಕ್ಷಾ ದಿನದಂದು ಆಯಾ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ಜಿಲ್ಲೆಯ ಹಿರಿಯ ಅಧಿಕಾರಿಗಳು ವಿಶೇಷ ವಿಚಕ್ಷಣಾ ದಳದ ಕರ್ತವ್ಯಗಳನ್ನು ತಪ್ಪದೇ ನಿರ್ವಹಿಸಬೇಕು. ತಪ್ಪಿದಲ್ಲಿ ಪರೀಕ್ಷಾ ಮಂಡಳಿಯ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು.
ಅಪರ ಜಿಲ್ಲಾಧಿಕಾರಿ ಮಂಗಳಾ ಮಾತನಾಡಿ, ಪರೀಕ್ಷಾ ದಿನಗಳಂದು ಬೆಸ್ಕಾಂ ಇಲಾಖೆಯು ಸಮರ್ಪಕವಾಗಿ ವಿದ್ಯುತ್ ಪೂರೈಸುವುದರೊಂದಿಗೆ ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಪರೀಕ್ಷಾ ಕೊಠಡಿ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಸ್ಥಾನಿಕ ಜಾಗೃತ ದಳ ಹಾಗೂ ಮೊಬೈಲ್ ಸ್ವಾಧಿನ ದಳಗಳ ಅಧಿಕಾರಿಗಳು ತಮಗೆ ವಹಿಸಿದ ಕರ್ತವ್ಯಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಿ.ಸಿ ಕ್ಯಾಮರಾಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವ ಕುರಿತು ನಿಗಾ ವಹಿಸಬೇಕು ಎಂದರು. ಬಾಡಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತದೆ. ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ತೆಗೆದುಕೊಳ್ಳಬೇಕು. ವಿದ್ಯುತ್ ತೊಂದರೆಯಾಗದ ರೀತಿ ಜನರೇಟರ್ ಇಲ್ಲವೆ ಯುಪಿಎಸ್ ವ್ಯವಸ್ಥೆ ಮಾಡಿಕೊಳ್ಳಬೇಕು. ಪರೀಕ್ಷೆ ಕೊಠಡಿಯ ಹೊರಗಡೆ 200ಮೀ ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಇದ್ದು, ಅವಶ್ಯ ಪೊಲೀಸ್ ಸಿಬ್ಬಂದಿ ನಿಯೋಜಿಸಲು ಪೊಲೀಸ್ ಅಧಿಕಾರಿಗಳು ಸಹಕಾರ ಕೋರುವಂತೆ ತಿಳಿಸಿದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ, ಎಸ್ಪಿ ಬಿ.ನಿಖಿಲ್ ಇತರರಿದ್ದರು.