ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್.ಎಂ.ಪಟೇಲ್ ಮಾತನಾಡಿದರು. 
ಜಿಲ್ಲೆ

ಜಿಲ್ಲೆಯಲ್ಲಿ ಕಾಂಗ್ರೆಸ್ ಅಸ್ತಿತ್ವಕ್ಕೆ ಶ್ರಮಿಸಿ

ಬೇಲೂರು: ಕಾಂಗ್ರೆಸ್ ಅಸ್ತಿತ್ವ ಜಿಲ್ಲೆಯಲ್ಲಿ ಶಾಶ್ವತವಾಗಿ ನೆಲೆಯೂರ ಬೇಕಾದರೆ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ಹೇಳಿದರು.


ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಮಾಜಿ ಸಚಿವರಾದ ಬಿ.ಶಿವರಾಂ ನೇತೃತ್ವದಲ್ಲಿ ಜಿಲ್ಲಾದ್ಯಂತ ಪ್ರವಾಸ ಕೈಗೊಂಡು ಚುನಾವಣಾ ಪ್ರಚಾರಕ್ಕೆ ಮುಂದಾಗುತ್ತೇನೆ. ಬಿ.ಶಿವರಾಂ ಅವರು ಪಕ್ಷದ ಅತ್ಯಂತ ಹಿರಿಯ ನಾಯಕರು. ಅವರ ಮಾರ್ಗದರ್ಶನ ನನಗೆ, ನಮ್ಮ ಪಕ್ಷಕ್ಕೆ ಅತ್ಯಮೂಲ್ಯ. ನಾನು ನಿಮ್ಮಗಳ ಮನೆಯ ಮಗನಾಗಿ, ಶಿಷ್ಯನಾಗಿ, ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ತಮ್ಮ ಋಣ ತೀರಿಸಲು ಶ್ರೀ ಚನ್ನಕೇಶವಸ್ವಾಮಿ ದೇವಾಲಯದ ಎದುರು ಪ್ರಮಾಣ ಮಾಡುತ್ತೇನೆ. ನನ್ನ ತಾತ ಜಿ.ಪುಟ್ಟಸ್ವಾಮಿಗೌಡರು ಬೇಲೂರಿನ ಅಭಿವೃದ್ಧಿ ಸೇರಿದಂತೆ ಜಿಲ್ಲೆಯ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ್ದಾರೆ. ಅವರ ಕುಡಿಯಾಗಿ ನಿಮ್ಮ ಮುಂದೆ ಬಂದು ನಿಂತಿದ್ದೇನೆ ಎಂದರು.
ಪ್ರಸ್ತುತ ನಮ್ಮ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿರುವುದರಿಂದ ಲೋಕಸಭೆ ಚುನಾವಣೆಯಲ್ಲಿ ನಮ್ಮ ಗೆಲುವು ಅನಿವಾರ್ಯ. ಹಾಗಾಗಿ ಪಕ್ಷದ ಮುಖಂಡರು, ಪ್ರತಿಯೊಬ್ಬ ಕಾರ್ಯಕರ್ತರು ತಾವೇ ಅಭ್ಯರ್ಥಿ ಎಂದು ಭಾವಿಸಿ, ತಮ್ಮ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ಕೈಗೊಂಡು ಪಕ್ಷದ ಗೆಲುವಿಗೆ ಕಾರಣರಾಗಬೇಕೆಂದು ಕೋರಿದರು.


ಮಾಜಿ ಸಚಿವ ಬಿ.ಶಿವರಾಂ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ, ಕಾಂಗ್ರೆಸ್ ಬೆಂಬಲದಿಂದ ಗೆದ್ದು, ಈಗ ಕಾಂಗ್ರೆಸ್ ವಿರುದ್ಧ ಮಾತನಾಡುತಿದ್ದಾರೆ. ಅವರಿಗೆ ಯಾವುದೇ ಬದ್ಧತೆ ಇಲ್ಲ. ಪಕ್ಷದ ಕಾರ್ಯಕರ್ತರು ಪ್ರಾಮಾಣಿಕವಾಗಿ ಎಲ್ಲ ಬೂತ್‌ಗಳಲ್ಲೂ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವಿಗೆ ಸಹಕರಿಸಬೇಕು ಎಂದರು.

ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್.ವೆಂಕಟೇಶ್ ಮಾತನಾಡಿದರು. ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ನಿಶಾಂತ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ದಾವುದ್, ಪುರಸಭೆ ಸದಸ್ಯರಾದ ಜಮಾಲೂದ್ದೀನ್, ಬಿ.ಗಿರೀಶ್, ಭರತ್ ಸೇರಿದಂತೆ ವಿವಿಧ ಸಮಿತಿ ಪದಾಧಿಕಾರಿಗಳು, ಮುಖಂಡರು ಹಾಗೂ ನೂರಾರು ಕಾರ್ಯಕರ್ತರಿದ್ದರು. ಎಂ.ಆರ್.ವೆಂಕಟೇಶ್, ನಿಶಾಂತ್, ಅಶೋಕ್, ಅಲ್ಪ ದಾವುದ್ ಇತರರು ಇದ್ದರು.