ಸಿರವಾರ: ದೇಶದಲ್ಲಿ ಕನ್ನಡಕ್ಕೆ ತನ್ನದೇ ಆದ ಇತಿಹಾಸ ಹೊಂದಿದೆ. ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡಾಗ ಸಾಹಿತ್ಯ ಬೆಳೆಯಲು ಸಾಧ್ಯ ಎಂದು ಕಸಾಪ ತಾಲೂಕು ಅಧ್ಯಕ್ಷ ಸುರೇಶ ಹೀರಾ ಹೇಳಿದರು.
ಕಸಾಪ ತಾಲೂಕು ಘಟಕ ಪಟ್ಟಣದ ಜ್ಞಾನ ಭಾರತಿ ಶಾಲೆಯಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ಮಕ್ಕಳು ಪುಸ್ತಕ ಹಿಡಿದು ಓದುವ ಸಮಯಕ್ಕಿಂತ ಹೆಚ್ಚಿನ ಸಮಯ ಮೊಬೈಲ್‌ನಲ್ಲಿ ಕಾಲ ಕಳೆಯುತ್ತಿದ್ದಾರೆ. ಮಕ್ಕಳಲ್ಲಿ ಸಾಹಿತ್ಯ ಅಭಿರುಚಿ ಬೆಳೆಸಲು ಕಸಾಪ ತಾಲೂಕು ಘಟಕ ಅನೇಕ ಚಟುವಟಿಕೆಗಳನ್ನು ಮಾಡುತ್ತಿದೆ ಎಂದರು.
ಕನ್ನಡ ಶಿಕ್ಷಕ ಕರ್ಣಾಕರ್ ಉಪನ್ಯಾಸ ನೀಡಿದರು. ಕಸಾಪ ತಾಲೂಕು ಘಟಕ ಗೌರವ ಅಧ್ಯಕ್ಷ ನಾಗಪ್ಪ ಪತ್ತಾರ, ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪ್ರಕಾಶ ಪಾಟೀಲ್, ಜ್ಞಾನ ಭಾರತಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಭಾಗೀರಥಿ, ಶಿಕ್ಷಕರಾದ ಬಸವರಾಜಯ್ಯ, ರಶ್ಮಿ ಇತರರಿದ್ದರು.