ಹನೂರು ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ತೆರೆದ ಮನೆ ಕಾರ್ಯಕ್ರಮದಲ್ಲಿ ಆಗಮಿಸಿದ್ದ ಗೌತಮ್ ಶಾಲೆಯ ವಿದ್ಯಾರ್ಥಿಗಳು ಮಾಹಿತಿ ಪಡೆದರು. ಶಶಿಕುಮಾರ್, ರಾಘವೇಂದ್ರ, ಚೈತ್ರಾ, ಮೂರ್ತಿ ಇತರರು ಇದ್ದರು. 
ಜಿಲ್ಲೆ

ಪೊಲೀಸರ ಕಾರ್ಯ ವಿಧಾನ ತಿಳಿದುಕೊಂಡ ವಿದ್ಯಾರ್ಥಿಗಳು

ರವಿಕುಮಾರ್ ಪಿ. ಕೆ

ಹನೂರು: ಠಾಣೆಗೆ ಆಗಮಿಸಿದ ವಿದ್ಯಾರ್ಥಿಗಳು ಪೊಲೀಸರನ್ನು ಪರಿಚಯ ಮಾಡಿಕೊಂಡರು. ಅವರು ನಿರ್ವಹಿಸುವ ಕಾರ್ಯವನ್ನು ತಿಳಿದರು. ಬಂದಿಖಾನೆಯನ್ನು ವೀಕ್ಷಿಸಿದರು. ದೂರು ನೀಡುವುದು ಹಾಗೂ ದಾಖಲಾಗುವ ಪ್ರಕರಣಗಳ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದರು. ಸಲಹೆ, ಸೂಚನೆಯನ್ನು ಆಲಿಸಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಆಯೋಜಿಸಿದ್ದ ತೆರೆದ ಮನೆ ಕಾರ್ಯಕ್ರಮದಲ್ಲಿ ಪಟ್ಟಣದ ಗೌತಮ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಕುತೂಹಲದಿಂದ ತಿಳಿದುಕೊಂಡ ಚಿತ್ರಣ.

50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಠಾಣೆಗೆ ಆಗಮಿಸಿದ್ದರು. ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರ ಮಾಡಿಕೊಂಡ ಪೊಲೀಸರು, ಠಾಣೆ ಹಾಗೂ ಪೊಲೀಸರು ನಿರ್ವಹಿಸಬೇಕಾದ ಸಂಪೂರ್ಣ ಕಾರ್ಯ ವಿಧಾನದ ಬಗ್ಗೆ ತಿಳಿಸಿಕೊಟ್ಟರು.

ಇನ್‌ಸ್ಪೆಕ್ಟರ್ ಶಶಿಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾನೂನು ಸುವ್ಯವಸ್ಥೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ತೆರೆದ ಮನೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ತಿಳಿದುಕೊಳ್ಳಬೇಕು. ಬಾಲ್ಯ ವಿವಾಹ ಕಾನೂನಿನ ಅಪರಾಧವಾಗಿದ್ದು, ಸಂಬಂಧಪಟ್ಟವರನ್ನು ಶಿಕ್ಷೆಗೆ ಗುರಿ ಪಡಿಸಲಾಗುತ್ತದೆ. ಆದರೂ ಹನೂರು ಭಾಗದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವುದು ವಿಪರ್ಯಾಸ. ಇದಕ್ಕೆ ಕಡಿವಾಣ ಹಾಕಬೇಕಿದೆ. ಹಾಗಾಗಿ ಪ್ರತಿಯೊಬ್ಬರೂ ಎಚ್ಚರ ವಹಿಸುವುದರ ಜತೆಗೆ ಈ ಬಗ್ಗೆ ಪಾಲಕರಿಗೆ ಮನವರಿಕೆ ಮಾಡಿಕೊಡಬೇಕು. ಒಂದು ವೇಳೆ ಗ್ರಾಮಗಳಲ್ಲಿ ಬಾಲ್ಯ ವಿವಾಹ ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು  ಹೇಳಿದರು.

ಇತ್ತೀಚೆಗೆ ಹನೂರು ಭಾಗದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವು, ನೋವುಗಳು ಸಂಭವಿಸುತ್ತಿವೆ. ಆದ್ದರಿಂದ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಸಿಬ್ಬಂದಿ ಚೈತ್ರಾ, ರಾಘವೇಂದ್ರ, ಮೂರ್ತಿ ಇತರರು ಇದ್ದರು.