ಜಿಲ್ಲೆ

ವಿದ್ಯಾರ್ಥಿಗಳು ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು

ಆದರ್ಶ್. ಎಂ.ಕೆ.

ಮಡಿಕೇರಿ: ಶಾಲಾ ಕಾಲೇಜು ಹಂತದಲ್ಲೇ ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು ಎಂದು ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಕಿವಿಮಾತು ಹೇಳಿದರು.


ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕ ಮತ್ತು ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘದ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.


ವಿದ್ಯಾರ್ಥಿಗಳು ಶಾಲಾ ಕಾಲೇಜು ಹಂತದಲ್ಲೇ ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು. ಎನ್.ಎಸ್.ಎಸ್, ಎನ್.ಸಿ.ಸಿಯಲ್ಲಿ ಸಾಕಷ್ಟು ಅವಕಾಶಗಳು ಸಿಗಲಿದ್ದು, ಎಲ್ಲಾ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಜೀವನವನ್ನು ತಿದ್ದಿಕೊಳ್ಳಲು ೨೩ ವರ್ಷದವರೆಗೆ ಮಾತ್ರ ಅವಕಾಶವಿರುತ್ತದೆ. ಈ ಸ್ಪರ್ಧಾತ್ಮಕ ಯುಗದಲ್ಲಿ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಜೀವನದಲ್ಲಿ ದುಡುಕಿ ನಿರ್ಧಾರ ತೆಗೆದುಕೊಳ್ಳಬಾರದು. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಉತ್ತಮ ವಿದ್ಯಾಭ್ಯಾಸ ಪಡೆದು ಆದರ್ಶ ವ್ಯಕ್ತಿಯಾಗಬೇಕೆಂದು ತಿಳಿ ಹೇಳಿದರು.


ಕಾಲೇಜಿನ ಉಪನ್ಯಾಸಕ ಎನ್.ಎಸ್.ಚಿದಾನಂದ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ ಚಟುವಟಿಕೆಗಳು ಈಗಾಗಲೇ ಪ್ರಾರಂಭವಾಗಿದ್ದು, ಇದು ಸಾಂಕೇತಿಕ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳಿಗೆ ಕೇವಲ ಓದು ಮಾತ್ರ ಮುಖ್ಯವಾಗಿರದೆ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ತೊಡಗಿಸಿಕೊಳ್ಳಬೇಕು. ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ. ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು, ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದರು.


ರಾಜ್ಯದಲ್ಲಿರುವ ೧೨೦೦ ಕಾಲೇಜುಗಳ ಪೈಕಿ ೫೦೦ಕ್ಕೂ ಹೆಚ್ಚು ಕಾಲೇಜುಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳಿವೆ. ಇದರ ಉದ್ದೇಶ ನನಗಲ್ಲ ನಿನಗೆ ಎಂದಾಗಿದೆ. ಎನ್.ಎಸ್.ಎಸ್ ಸೇವಾ ಮನೋಭಾವನೆಯನ್ನು ಮೂಡಿಸುತ್ತದೆ ಎಂದು ಹೇಳಿದರು.


ಇದೇ ಸಂದರ್ಭ ೨೦೨೪-೨೫ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಕಾಲೇಜಿನ ಉಪನ್ಯಾಸಕ ಟಿ.ಕೆ.ಶಶಿ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು. ದೇಶಕ್ಕಾಗಿ ಸಮರ್ಪಣಾ ಮನೋಭಾವದಿಂದ ದುಡಿಯುವುದಲ್ಲದೆ, ಹಿಂಸಾ ಕಾರ್ಯದಲ್ಲಿ ತೊಡಗುವುದಿಲ್ಲವೆಂದು ಪ್ರಮಾಣ ಮಾಡಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಜನಪದ ಗೀತೆ ಹಾಡಿ ನೆರೆದಿದ್ದವರನ್ನು ರಂಜಿಸಿದರು.


ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ್ ಉಪಸ್ಥಿತರಿದ್ದರು.