ಮಡಿಕೇರಿ: ವಿದ್ಯಾರ್ಥಿಗಳು ಸಿಕ್ಕಿದ ವೇದಿಕೆಯನ್ನು ಬಳಸಿಕೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಪ್ರಯೋಜನವಾಗಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟರಾಜು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಮಗ್ರ ಶಿಕ್ಷಣ, ಕರ್ನಾಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸಂತಮೈಕಲರ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಮಡಿಕೇರಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯೂ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಸಿಕ್ಕಿದ ಅವಕಾಶಗಳಲ್ಲಿ ಪ್ರತಿಭೆಯನ್ನು ತೋರಿಸಿ ಬಹುಮಾನ ಪಡೆಯುವಂತಾಗಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವುದು ಅತೀ ಮುಖ್ಯ, ಸ್ಪರ್ಧೆಯಲ್ಲಿ ಸೋಲು ಗೆಲುವುಗಳನ್ನು ಸಮನಾಂತರವಾಗಿ ಸ್ವೀಕರಿಸಿ, ಸೋಲು ಗೆಲುವಿನ ಮೆಟ್ಟಿಲು ಎಂದು ತಿಳಿಸಿದರು.
ಸ್ಪರ್ಧೆಯಲ್ಲಿ ೦೧ ರಿಂದ ೧೨ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳು ನಡೆಯುತ್ತಿವೆ. ಎಲ್ಲರೂ ಉತ್ತಮ ಪೈಪೋಟಿಯೊಂದಿಗೆ ಸ್ಪರ್ಧಿಸಿ ಮುಂದೆ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲೂ ತಮ್ಮ ಪ್ರತಿಭೆಯನ್ನು ತೋರುವಂತಾಗಲಿ ಎಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಣ ಸಂಯೋಜಕ ಮಾರುತಿ ಅರೋರ, ಪ್ರತಿಭಾ ಕಾರಂಜಿ ಮಕ್ಕಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ತೋರ್ಪಡಿಸುವ ಕಾರ್ಯಕ್ರಮ ಇದಾಗಿದೆ. ಮಕ್ಕಳಲ್ಲಿ ಯಾವ ರೀತಿಯ ಪ್ರತಿಭೆಯಿದೆ ಎಂದು ಊಹಿಸಲು ಅಸಾಧ್ಯ. ಇಂತಹ ಕಾರ್ಯಕ್ರಮದಿಂದ ಮಕ್ಕಳು ಕಲಿಕೆಯ ಜೊತೆ ಇನ್ನಿತರ ಚಟುವಟಿಕೆಗಳಲ್ಲೂ ಭಾಗವಹಿಸುವುದರಿಂದ ಅವರ ಪ್ರತಿಭೆಯು ಅನಾವರಣವಾಗುತ್ತದೆ ಎಂದು ಹೇಳಿದರು.
ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಟಿ.ಮಂಜುನಾಥ್ ಮಾತನಾಡಿ, ಕೋವಿಡ್ ನಂತರ ಮಕ್ಕಳ ಪ್ರತಿಭೆಯನ್ನು ಪ್ರದರ್ಶಿಸುವಂತಹ ಕಾರ್ಯಕ್ರಮ ಇದಾಗಿದೆ. ಇಂತಹ ಕಾರ್ಯಕ್ರಮಗಳಿಂದ ಮಕ್ಕಳಲ್ಲಿರುವ ಪ್ರತಿಭೆಯು ಹೊರಜಗತ್ತಿಗೆ ಪರಿಚಯವಾಗುತ್ತದೆ ಇದರ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಜಿ.ಶೋಭಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪೊನ್ನಚನ ಶ್ರೀನಿವಾಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಪೆರಾಜೆ, ಸಂತ ಮೈಕಲರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಾನ್ಸನ್, ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕರ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎಸ್.ರವಿಕೃಷ್ಣ, ಅನುದಾನಿತ ಪ್ರೌಢಶಾಲೆ ಶಿಕ್ಷಕರ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷ ಕೆ.ಎನ್.ಶಿವಪ್ರಸಾದ್ ಇತರರಿದ್ದರು.