ಜಿಲ್ಲೆ

ಬೈಂದೂರಲ್ಲಿ ವಿಮಾನ ನಿಲ್ದಾಣ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಸಿ

ಇಂದಿರಾ ಎನ್ ಕೆ

ಬೈಂದೂರು: ಬೈಂದೂರಿನಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ನಿರ್ಮಾಣದ ಪ್ರಸ್ತಾವನೆಯನ್ನು ಶೀಘ್ರ ಕೇಂದ್ರ ಸರ್ಕಾರಕ್ಕೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಸಿಎಂ ಸಿದ್ದ್ಧರಾಮಯ್ಯ ಅವರನ್ನು ಭೇಟಿ ಮಾಡಿ, ಆದಷ್ಟು ಬೇಗ ರಾಜ್ಯ ಸರ್ಕಾರದಿಂದ ಜಮೀನು ಹಸ್ತಾಂತರ ಹಾಗೂ ಅಗತ್ಯ ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ಕೋರಿದ್ದಾರೆ.

ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿರುವ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಕರ್ನಾಟಕ ರಾಜ್ಯದಲ್ಲಿ 2ನೇ ಅತೀ ಹೆಚ್ಚು ಆದಾಯ ಗಳಿಸುವ ದೇವಸ್ಥಾನವಾಗಿದೆ. ವಿವಿಧ ರಾಜ್ಯಗಳಿಂದ ಹಾಗೂ ಹೊರ ದೇಶಗಳಿಂದ ಪ್ರತಿದಿನ ಹತ್ತು ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಬೈಂದೂರಿನಲ್ಲಿ ವಿಮಾನ ನಿಲ್ದಾಣ ಮಂಜೂರು ಮಾಡುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವರಿಗೆ ಈ ಹಿಂದೆಯೇ ಸಂಸದರು ಮನವಿ ಸಲ್ಲಿಸಿದ್ದು, ರಾಜ್ಯ ಸರ್ಕಾರದಿಂದ ಜಮೀನು ಹಸ್ತಾಂತರ ಹಾಗೂ ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ಬಂದಲ್ಲಿ ಶೀಘ್ರ ವಿಮಾನ ನಿಲ್ದಾಣ ಮಂಜೂರು ಮಾಡುವುದಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವರು ತಿಳಿಸಿದ್ದಾರೆ ಎಂದು ಸಂಸದರು ಸಿಎಂ ಸಿದ್ಧರಾಮಯ್ಯ ಅವರಿಗೆ ವಿವರಿಸಿದ್ದಾರೆ.

ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣಕ್ಕೆ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಅರಣ್ಯ ಇಲಾಖೆಯ ವಿಸ್ತರಣಾ ಬ್ಲಾಕ್ ಸ್ಥಳ ಲಭ್ಯವಿದ್ದು, ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತರಿಗೆ ಅನುಕೂಲವಾಗಲಿದೆ. ಈಗಾಗಲೇ ಕೆಎಸ್‌ಐಐಡಿಸಿ ವತಿಯಿಂದ ಸರ್ವೆ ಕಾರ್ಯ ನಡೆದು ಉಡುಪಿ ಜಿಲ್ಲಾಧಿಕಾರಿಗಳಿಂದ ದಾಖಲೆಗಳನ್ನು ಪಡೆದುಕೊಳ್ಳಲಾಗಿದೆ ಎಂದು ಸಿಎಂಗೆ ತಿಳಿಸಿದ್ದಾರೆ.