ಚಾಮರಾಜನಗರ: ಕಳೆದ ಒಂದು ವರ್ಷದ ಅವಧಿಯಲ್ಲಿ ನರೇಗಾ ಯೋಜನೆಯಡಿ ಪಿ.ಜಿ. ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 71 ಕಾಮಗಾರಿಗಳು ನಡೆದಿದ್ದು, 39 ಲಕ್ಷ ರೂ. ಅನುದಾನ ಖರ್ಚು ಮಾಡಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಗ್ರಾಮಸ್ಥರು ಅರ್ಜಿ ಸಲ್ಲಿಸಬಹುದು ಎಂದು ನರೇಗಾ ತಾಲೂಕು ಸಂಯೋಜಕ ನಾರಾಯಣ್ ತಿಳಿಸಿದರು.
ಹನೂರು ತಾಲೂಕಿನ ಪಿ.ಜಿ. ಪಾಳ್ಯ ಗ್ರಾಪಂ ವತಿಯಿಂದ ಶುಕ್ರವಾರ ಕುಡುವಾಳೆ ಗ್ರಾಮದಲ್ಲಿ ಆಯೋಜಿಸಿದ್ದ ನರೇಗಾ ಯೋಜನೆಯ ಸಾಮಾಜಿಕ ಲೆಕ್ಕ ತಪಾಸಣಾ ಹಾಗೂ 15ನೇ ಹಣಕಾಸು ಯೋಜನೆಯ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.
ನರೇಗಾ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದರಲ್ಲಿ ಪ್ರತಿಯೊಬ್ಬರೂ ಉದ್ಯೋಗವನ್ನು ಪಡೆಯಬಹುದು. ಈ ಯೋಜನೆಯಡಿ ಯಾವುದೇ ನಿರ್ಬಂಧ ಇಲ್ಲ. ಹಾಗಾಗಿ, ಬೇಡಿಕೆಗೆ ಅನುಸಾರವಾಗಿ ಅನುಮತಿಸಲ್ಪಟ್ಟ ಕೃಷಿ ಹೊಂಡ ನಿರ್ಮಾಣ, ದನದ ಕೊಟ್ಟಿಗೆ, ಜಮೀನು, ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ, ಕೆರೆ ಅಭಿವೃದ್ಧಿ ಸೇರಿದಂತೆ 267 ವೈಯಕ್ತಿಕ ಹಾಗೂ ಸಾಮೂಹಿಕ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಆದ್ದರಿಂದ ಪ್ರತಿಯೊಬ್ಬರೂ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳವುದರ ಮೂಲಕ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ನೋಡಲ್ ಅಧಿಕಾರಿ ಶಿಕ್ಷಣ ಇಲಾಖೆ ಸಿಆರ್‌ಪಿ ದೇವರಾಜು, ಗ್ರಾಪಂ ಅಧ್ಯಕ್ಷ ಸಂತೋಷ್‌ಕುಮಾರ್, ಉಪಾಧ್ಯಕ್ಷೆ ಸುಶೀಲಮ್ಮ, ಸದಸ್ಯ ಕೃಷ್ಣಮೂರ್ತಿ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಪಿಡಿಒ ನಂಜುಂಡಸ್ವಾಮಿ, ಎಸ್‌ಡಿಎ ಶಂಕರ್ ಹಾಗೂ ಇನ್ನಿತರರು ಇದ್ದರು.
39 ಲಕ್ಷ ರೂ. ಅನುದಾನ ಬಳಕೆ:ಈ ಯೋಜನೆಯಡಿ ಗ್ರಾಪಂ ವತಿಯಿಂದ ಕಳೆದ ಒಂದು ವರ್ಷದ ಅವಧಿಯಲ್ಲಿ ಸಂಜೀವಿನಿ ಶೆಡ್, ದನದ ಕೊಟ್ಟಿಗೆ, ಪೌಷ್ಟಿಕ ತೋಟ ಸೇರಿದಂತೆ 71 ಕಾಮಗಾರಿಗಳು ನಡೆದಿದ್ದು, ಕೂಲಿ ವೆಚ್ಚ 39,10,070 ರೂ. ಅನುದಾನ ಬಳಕೆಯಾಗಿದೆ. ಆದರೆ, ಕಾರಣಾಂತರದಿಂದ ಸಾಮಗ್ರಿ ವೆಚ್ಚವಾಗಿಲ್ಲ. ಕಾಮಗಾರಿಗಳ ಸಂಬಂಧ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ವರದಿ ಸಂಗ್ರಹಿಸಲಾಗಿದೆ. ಇನ್ನು 15ನೇ ಹಣಕಾಸು ಯೋಜನೆಯಡಿ ಕುಡಿಯುವ ನೀರು, ಸ್ವಚ್ಛತೆ ಹಾಗೂ ಬೀದಿ ದೀಪದ ನಿರ್ವಹಣೆಗೆ ಅನುದಾನ ಬಳಕೆ ಮಾಡಲಾಗಿದೆ ಎಂದು ಮಾಹಿತಿ ತಿಳಿಸಿದರು.