ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ತಾಲೂಕಿನ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಮುಖಂಡರು ದೇವನಹಳ್ಳಿಯ ಬೀರಸಂದ್ರದಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಅಪರ ಜಿಲ್ಲಾಧಿಕಾರಿ ಸುಮಾ ಮೂಲಕ ಸಿಎಂಗೆ ಮನವಿ ರವಾನಿಸಿದರು.
ಸುಮಾರು 159 ಕೋಟಿ ರೂ. ಖರ್ಚು ಮಾಡಿ ರಾಜ್ಯದ ಎಲ್ಲ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ನಡೆಸಿ ತಯಾರಿಸಿರುವ ಸಮೀಕ್ಷಾ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಮೀನಮೇಷ ಎಣಿಸುವ ಅಗತ್ಯವಿಲ್ಲ. ಈ ವರದಿ ತಕ್ಷಣ ಫಲಪ್ರದ ಆಗಬೇಕು ಎಂದು ಒಕ್ಕೂಟದ ಸಂಚಾಲನಾ ಸಮಿತಿ ಸದಸ್ಯರೂ ಆದ ರಾಜ್ಯ ಕುರುಬರ ಸಂಘದ ಖಜಾಂಚಿ ಕೆ.ಎಂ.ಕೃಷ್ಣಮೂರ್ತಿ ಒತ್ತಾಯಿಸಿದರು.
18ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಸ್ವಾಗತಾರ್ಹ. ಕರ್ನಾಟಕ 12ನೇ ಶತಮಾನದಲ್ಲೇ ಸಮಸಮಾಜವನ್ನು ಪ್ರತಿಪಾದಿಸಿದ ರಾಜ್ಯ. ಇಲ್ಲಿ ನಾಲ್ವಡಿ ಕೃಷ್ಣ್ಣರಾಜ ಒಡೆಯರ್ ಕಾಲದಲ್ಲಿ ಮೈಸೂರು ಸಂಸ್ಥಾನದಲ್ಲಿ ಮೀಸಲಾತಿ ಜಾರಿ ಮಾಡಲಾಗಿತ್ತು. ದಿವಂಗತ ದೇವರಾಜ ಅರಸು ಅವರು ‘ಹಾವನೂರು ಆಯೋಗ’ ರಚಿಸಿ ಹಿಂದುಳಿದ ವರ್ಗಗಳ ಅಧ್ಯಯನಕ್ಕೆ ಮುನ್ನುಡಿ ಬರೆದರು. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೊಯ್ಲಿ ಅವರು ಮೀಸಲಾತಿ ಮಿತಿಯನ್ನು ಶೇ.73ಕ್ಕೆ ಏರಿಸುವ ಪ್ರಯತ್ನ ಮಾಡಿದ್ದರು. ಹೀಗೆ ಹಿಂದಿನಿಂದಲೂ ಸಾಮಾಜಿಕ ನ್ಯಾಯದ ಪರವಾಗಿರುವ ಕರ್ನಾಟಕ ಈಗ ಜಾತಿ ಜನಗಣತಿ ಅಥವಾ ರಾಜ್ಯದ ಎಲ್ಲ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಮೀಕ್ಷಾ ವರದಿಯನ್ನು ತಯಾರಿಸಿರುವುದು ದೇಶಕ್ಕೆ ಮಾದರಿಯಾಗಿದೆ ಎಂದರು.
ಅವಕಾಶಗಳು ಲಭಿಸಿಲ್ಲ ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗಕ್ಕೂ ಹೆಚ್ಚಿರುವ ಅಹಿಂದ ವರ್ಗಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗ ಅವಕಾಶ ಮತ್ತು ವಿದ್ಯಾಭ್ಯಾಸದ ಅವಕಾಶ ಲಭಿಸಿಲ್ಲ ಎಂದು ಕೆ.ಎಂ.ಕೃಷ್ಣಮೂರ್ತಿ ಹೇಳಿದರು. ಜಾತಿ ಜನಗಣತಿ ವರದಿ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ಸರ್ಕಾರಗಳು ರೂಪಿಸಬಹುದಾಗಿದೆ. ಈಗ ರಾಜ್ಯದ ಸುಮಾರು ಆರೂವರೆ ಕೋಟಿ ಜನಸಂಖ್ಯೆಯ ಅಧ್ಯಯನ ಮಾಡಿದ್ದು, ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲ ಜಾತಿಗಳಿಗೂ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲ ಆಗಲಿದೆ. ಹಾಗಾಗಿ ಎಲ್ಲ ಜಾತಿಗಳು ಕೂಡ ಜಾತಿ ಜನಗಣತಿ ವರದಿ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿದರು.