ಸರಗೂರು: ಅಮರ ಶಿಲ್ಪಿ ಜಕಣಾಚಾರಿ ಅವರ ಕಲೆಯನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಹಸೀಲ್ದಾರ್ ಮೋಹನಕುಮಾರಿ ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಬೇಲೂರು, ಹಳೇಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಮಾಡುವ ಕೆಸದ ಬಗ್ಗೆ ತಿಳಿವಳಿಕೆ, ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸ್ಸು ಲಭಿಸುತ್ತದೆ. ನಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸುತ್ತದೆ. ಸಾಧಕರನ್ನು ಸ್ಮರಣೆ ಮಾಡಿದರಷ್ಟೇ ಸಾಲದು. ಬದಲಾಗಿ ಅವರ ಗುಣ ಮತ್ತು ಬೆಳೆದು ಬಂದ ದಾರಿಯನ್ನು ತಿಳಿದು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದು ಹೇಳಿದರು.
ವಿಶ್ವಕರ್ಮ ಸಂಘದ ಗೌರವಾಧ್ಯಕ್ಷ ಜಿ.ರವಿ ಮಾತನಾಡಿದರು. ವಿಶ್ವಕರ್ಮ ಸಮಾಜದ ಟೌನ್ ಅಧ್ಯಕ್ಷ ನಟರಾಜು, ಉಪಾಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಸಂತೋಷ್, ನಿವೃತ್ತ ಪಿಡಿಒ ಲಿಂಗಾಚಾರ್, ನಿವೃತ್ತ ಶಿಕ್ಷಕ ಪುಟ್ಟಸ್ವಾಮಿಚಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಮಸ್ವಾಮಿ, ಉಪತಹಸೀಲ್ದಾರ್ ಸುನೀಲ್, ಆರ್‌ಐ ಶ್ರೀನಿವಾಸ, ಚೈತ್ರಾ, ಮಾಜಿ ಅಧ್ಯಕ್ಷ ಇತರರಿದ್ದರು.