ಜಿಲ್ಲೆ

ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ನಿಗದಿತ ಅವಧಿಯಲ್ಲಿ ಸರ್ಕಾರದ ಇಲಾಖೆಗಳ ಎಲ್ಲ ಕಾರ್ಯಕ್ರಮ ರ್ಪೂಣಗೊಳ್ಳಬೇಕು. ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟ, ಹೆಚ್ಚುವರಿ ವೆಚ್ಚ, ಅವೈಜ್ಞಾನಿಕವಾಗಿ ಅನುಷ್ಠಾನ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್​ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ, ಜಿಲ್ಲಾ ಮಟ್ಟದ ಎಲ್ಲ ಇಲಾಖೆ, ನಿಗಮ ಮಂಡಳಿಗಳ ಅಧಿಕಾರಿಗಳ ಸಭೆ, ಕಾರ್ಯಕ್ರಮಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳನ್ನು ನಿಯಮಾನುಸಾರ ಮಾಡಿ, ನಿಗದಿಪಡಿಸಿದ ಅನುದಾನ ಬಳಸಬೇಕು. ಇಲಾಖೆಗಳಿಗೆ ಹಂಚಿದ ಅನುದಾನ ಲ್ಯಾಪ್ಸ್​ ಆಗದಂತೆ ಎಚ್ಚರ ವಹಿಸಿ ಬಳಸುವ ಮೂಲಕ ನೀಡಿರುವ ಗುರಿ ಸಾಧಿಸಬೇಕು ಎಂದರು.
ಮಳೆಗಾಲದಲ್ಲಿ ಪ್ರವಾಹ ಅಥವಾ ಕೆರೆಗಳ ಒಡ್ಡು ಒಡೆದು ಹಾನಿ ಆಗದಂತೆ ಎಚ್ಚರಿಕೆ ವಹಿಸಬೇಕು. ಗ್ರಾಮ ಮಟ್ಟದಿಂದ ಹೋಬಳಿ, ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಜನರ ಸಮಸ್ಯೆ ಪರಿಹರಿಸಬೇಕು. ಸರ್ಕಾರದ ಮಹತ್ವಾಕಾಂಕ್ಷಿ, ಜನಪರ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪ ಆಗದಂತೆ ಕ್ರಮವಹಿಸಿ. ಅರ್ಹರಿಗೆ ಯೋಜನಗಳ ಲಾಭ ಲಭಿಸಬೇಕು ಎಂದರು.
ಶಾಲಾ ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ, ಆಹಾರ, ಕುಡಿಯುವ ನೀರು ಮತ್ತು ನೈರ್ಮಲ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಲೋಕೊಪಯೋಗಿ ಸೇರಿ ಪ್ರಮುಖ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಜಿಲ್ಲೆಯಲ್ಲಿ ಇಲಾಖೆಗಳ ಕಾರ್ಯ ವೈಖರಿಯನ್ನು ನಿರಂತರವಾಗಿ ಪರಿಶೀಲಿಸಿ ನಿಗದಿತ ಗುರಿ ಸಾಧನೆಗೆ ಕ್ರಮ ವಹಿಸಲಾಗಿದೆ ಎಂದರು.
ಜಿಪಂ ಸಿಇಒ ಸ್ವರೂಪ ಟಿ.ಕೆ, ಜಿಪಂ ಉಪ ಕಾರ್ಯದರ್ಶಿ ಬಿ.ಎಸ್​. ಮೂಗನೂರಮಠ, ಉಪವಿಭಾಗಾಧಿಕಾರಿ ಶಾಲಂ ಹುಸೇನ್​, ಡಿಡಿಪಿಐ ಎಸ್​.ಎಸ್​. ಕೆಳದಿಮಠ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಗಪ್ಪ ಗಾಬಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭಾ, ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು. ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ವಂದಿಸಿದರು.