ಮಂಡ್ಯ: ಕಲಬುರಗಿಯಲ್ಲಿ ಸೆ.29 ಮತ್ತು 30ರಂದು ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ ಮತ್ತು ಕರ್ನಾಟಕ ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯ ಸಂಚಾಲಕ ಎನ್.ಎಲ್.ಭರತರಾಜ್ ತಿಳಿಸಿದರು.
ಉತ್ತರಪ್ರದೇಶ, ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ್, ಮಹಾರಾಷ್ಟ್ರ, ತಮಿಳುನಾಡು, ಬಿಹಾರ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಕಬ್ಬು ಬೆಳೆಗಾರರ ಸಂಘದ ಮುಖಂಡರು ಭಾಗವಹಿಸಲಿದ್ದಾರೆ. ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಡಿ.ರವೀಂದ್ರನ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಕೆ.ಶುಕ್ಲಾ, ಅಖಿಲ ಭಾರತ ಕಿಸಾನ್ ಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ವಿಜು ಕೃಷ್ಣನ್ ಮುಖ್ಯಭಾಷಣ ಮಾಡಲಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕೇಂದ್ರ ಸರ್ಕಾರ ಪ್ರತಿ ಟನ್ ಕಬ್ಬಿಗೆ 5 ಸಾವಿರ ರೂ ನಿಗದಿ ಮಾಡದೆ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಶಾಮೀಲಾಗಿದೆ. ಅದೇ ರೀತಿ ರಾಜ್ಯ ಸರ್ಕಾರ ಖಾಸಗಿ ಕಾರ್ಖಾನೆ ಮಾಲೀಕರ ಮುಲಾಜಿನಲ್ಲಿ ನಡೆಯುತ್ತಿದೆ. ಸಮ್ಮೇಳನದಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.
ಕಬ್ಬು ಬೆಳೆಗಾರರಾದ ಕುಳ್ಳೇಗೌಡ, ಕೆಂಪರಾಜು, ರಾಮಕೃಷ್ಣಪ್ಪ, ಜಯಸ್ವಾಮಿ, ಉಮಾಪತಿ, ಶಿವರಾಮು ಇತರರಿದ್ದರು.