ಬೆಳಗಾವಿ: ಲಕ್ಷಾಂತರ ರೈತರ ಜೀವನಾಡಿಯಾಗಿರುವ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಸರ್ಕಾರದ ನೆರವು ಕೋರಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಶೀಘ್ರವೇ ಮುಖ್ಯಮಂತ್ರಿ ಬಳಿ ನಿಯೋಗ ಒಯ್ಯಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಚನ್ನಮ್ಮನ ಕಿತ್ತೂರು ತಾಲೂಕಿನ ಹುಣಶಿಕಟ್ಟಿ ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ್ದ ಸಚಿವರು, ಶಾಸಕರು, ಡಿಸಿಸಿ ಬ್ಯಾಂಕ್ ನೂತನ ನಿರ್ದೇಶಕರು ಹಾಗೂ ಮಲಪ್ರಭಾ ಶುಗರ್ಸ್ ನೂತನ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಖಾನೆ ಸಂಕಷ್ದಲ್ಲಿದೆ. ನಮ್ಮ ಮೇಲೆ ವಿಶ್ವಾಸವಿಟ್ಟು ರೈತರು ನಮ್ಮ ಪೆನಲ್ ಗೆಲ್ಲಿಸಿದ್ದಾರೆ. ಸರ್ಕಾರದಿಂದ ಸಾಧ್ಯವಾದ ನೆರವು ಪಡೆದುಕೊಂಡು ಕಾರ್ಖಾನೆ ಅಭಿವೃದ್ಧಿಪಡಿಸಲಾಗುವುದು. ಅಧಿಕಾರ ಸಿಕ್ಕಾಗ ಜನರ ಕೆಲಸ ಮಾಡಿಕೊಡಬೇಕು. ಜನರ ವಿಶ್ವಾಸ ಗಳಿಸಬೇಕು. ಸಹಕಾರ ಕ್ಷೇತ್ರದಲ್ಲಿ ಪಕ್ಷ ಇಲ್ಲ. ನಾವೆಲ್ಲರೂ ಸೇರಿ ಪಕ್ಷಾತೀತವಾಗಿ ಕಾರ್ಖಾನೆಯನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಸಚಿವ ಸತೀಶ ಜಾರಕಿಹೊಳಿ, ಶಾಸಕರಾದ ಮಹಾಂತೇಶ ಕೌಜಲಗಿ, ವಿಶ್ವಾಸ ವೈದ್ಯ, ಆಸೀಫ್ ಸೇಠ್, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ನಾನಾಸಾಹೇಬ ಪಾಟೀಲ, ರಾಹುಲ ಜಾರಕಿಹೊಳಿ, ಸುನಿಲ ಹನಮಣ್ಣವರ, ಶಂಕರ ಸದೆಪ್ಪ ಹೋಳಿ, ಲಕ್ಷ್ಮೀ ಹೋಳಿ, ದೀಪಾ ಹೋಳಿ, ಬಸವರಾಜ ಶೇಗಾವಿ ಇತರರಿದ್ದರು.