ಸುಂಟಿಕೊಪ್ಪ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುವ ಮನವಿಯನ್ನು ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗೂಂಡುರಾವ್ ಭರವಸೆ ನೀಡಿದರು.
ಸುಂಟಿಕೊಪ್ಪ ಆರೋಗ್ಯ ಕೇಂದ್ರಕ್ಕೆ ಸೋಮವಾರ ಸಂಜೆ ಭೇಟಿ ಮಾಡಿದ ಸಚಿವರು, ಮಡಿಕೇರಿ ಕ್ಷೇತ್ರದ ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಮತ್ತು ಅಧಿಕಾರಿಗಳಿಂದ ಕುಂದು-ಕೊರತೆ ಆಲಿಸಿ ಮಾತನಾಡಿದರು.
ಇಂದಿನ ಮುಖ್ಯ ಬೇಡಿಕೆಗಳಾದ ರಾತ್ರಿ ಪಾಳಿಗೆ ವೈದ್ಯರ ನೇಮಿಸುವುದು, ಮರಣೋತ್ತರ ಪರೀಕ್ಷೆಗೆ ವ್ಯವಸ್ಥೆ ಮಾಡುವುದು ಮತ್ತು ಒಟ್ಟಾರೆಯಾಗಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಬೇಕೆಂಬುದನ್ನು ಆದ್ಯತೆ ಮೇರೆಗೆ ಪರಿಗಣಿಸಲಾಗುವುದು. ಸ್ಥಳೀಯವಾಗಿ ವೈದ್ಯರು ಲಭ್ಯವಿದಲ್ಲಿ ಅವರನ್ನು ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೇಮಕಾತಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದರು.
ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ ಮಾತನಾಡಿ, ಈಗಾಗಲೇ ಕುಶಾಲನಗರದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸಲಾಗಿದೆ. ಸೋಮವಾರಪೇಟೆಯಲ್ಲಿ ಮೂವರು ತಜ್ಞ ವೈದ್ಯರನ್ನು ನೇಮಿಸಿಕೊಳ್ಳಲು ಅನುಮತಿ ಪಡೆಯಲಾಗಿದೆ. ಆದಷ್ಟು ಶೀಘ್ರವೇ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದದರ್ಜೆಗೇರಿಸಲು ಸಚಿವರ ಮೂಲಕ ಸರ್ಕಾರದೊಂದಿಗೆ ವ್ಯವಹಾರಿಸಲಾಗುವುದು ಎಂದು ಭರವಸೆ ನೀಡಿದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಜನಸಂಖ್ಯೆಗೆ ಅನುಗುಣವಾಗಿ ಮೇಲ್ದರ್ಜೆಗೆ ಏರಿಸಬೇಕಾಗಿದೆ. ಈ ಆಸ್ಪತ್ರೆಯ ಸುತ್ತಮುತ್ತಲಿನ 7 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಈ ಪ್ರಾಥಮಿಕ ಆರೋಗ್ಯ ಕೇಂದ್ರ ಆಧಾರವಾಗಿದೆ. ಇಲ್ಲಿ ವೈದ್ಯರ ಕೊರತೆ ಹೆಚ್ಚಿನ ಚಿಕಿತ್ಸೆ ಅಲಭ್ಯತೆ, ಜೌಷಧಗಳ ಅಲಭ್ಯತೆ, ಮರಣೋತ್ತರ ಪರೀಕ್ಷೆ ನಡೆಯದಿರುವುದು ಸೇರಿದಂತೆ ಇನ್ನೂ ಹಲವಾರು ಸಮಸ್ಯೆಗಳಿವೆ. ಇವುಗಳನ್ನು ಆದ್ಯತೆ ಮೇರೆಗೆ ಪರಿಗಣಿಸಿ ಪರಿಹರಿಸಬೇಕಿದೆ ಎಂದರು.
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ಮತ್ತು ಸದಸ್ಯರು ಸಚಿವರಿಗೆ ಮನವಿ ಅರ್ಪಿಸಿ, ಈ ಆರೋಗ್ಯ ಕೇಂದ್ರವು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಬೇಕಾದ ಅವಶ್ಯಕತೆಯನ್ನು ಮನದಟ್ಟು ಮಾಡಿಕೊಟ್ಟರು.
ಸುಂಟಿಕೊಪ್ಪ ಪಟ್ಟಣದ ಮಧ್ಯಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 275 ಹಾದು ಹೋಗಿದೆ. ಅದೇ ರೀತಿ ಚೆಟ್ಟಳ್ಳಿ ಮಾದಾಪುರ ರಾಜ್ಯ ಹೆದ್ದಾರಿ ಹಾದು ಹೋಗಿದ್ದು ಇತ್ತೀಚಿನ ವರ್ಷಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳದ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಹೆಚ್ಚಿದ್ದು ಅಪಘಾತಗಳ ಸಂಖ್ಯೆ ದ್ವಿಗುಣಗೊಂಡಿದೆ. ತುರ್ತು ಸಂದರ್ಭಗಳಲ್ಲಿ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಚ್ಚಿನ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ವ್ಯವಸ್ಥೆ ಇಲ್ಲದಿರುವುದರಿಂದ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ಪರಿಸ್ಥಿತಿಯ ವಾಸ್ತವ ಚಿತ್ರಣವನ್ನು ಸಚಿವರಿಗೆ ಮನದಟ್ಟು ಮಾಡಿ ಪಂಚಾಯಿತಿ ವತಿಯಿಂದ ಮನವಿ ಸಲ್ಲಿಸಿದರು.
ಜಿಪಂ ಮಾಜಿ ಸದಸ್ಯ ಪಿ.ಎಂ.ಲತೀಫ್ ಮಾತನಾಡಿ, ಕೂಲಿ ಕಾರ್ಮಿಕರು ಹೆಚ್ಚಾಗಿರುವ ಈ ವ್ಯಾಪ್ತಿಯಲ್ಲಿ ಜನರು ಈ ಆರೋಗ್ಯ ಕೇಂದ್ರವನ್ನೇ ಅವಲಂಬಿಸಿದ್ದಾರೆ. ಆದರೆ ಸಂಜೆ 4 ಗಂಟೆಯ ಬಳಿಕ ಇಲ್ಲಿ ವೈದ್ಯರು ಇಲ್ಲದೆ ಇರುವುದರಿಂದ ತುರ್ತು ಸಂದರ್ಭಗಳಲ್ಲಿ ಪ್ರಾಥಮಿಕ ಚಿಕಿತ್ಸೆ ದೊರಕದಿರುವುದು ಬೇಸರದ ಸಂಗತಿ. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಪರಿವರ್ತಿಸುವುದೇ ಈ ಸಮಸ್ಯೆಗಳಿಗೆಲ್ಲ ಪರಿಹಾರ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡರಾದ ಎಂ.ಎ.ಉಸ್ಮಾನ್ ಹಾಗೂ ರಫೀಕ್‌ಖಾನ್ ಮಾತನಾಡಿ, ಆಸ್ಪತ್ರೆಯಲ್ಲಿ ವೈದ್ಯರ ಮತ್ತು ಸಿಬ್ಬಂದಿ ಕೊರತೆ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಡಿಎಚ್‌ಒ ಡಾ.ಸತೀಶ್‌ಕುಮಾರ್, ತಾಲೂಕು ಟಿಎಚ್‌ಒ ಡಾ.ಇಂದೂಧರ, ತಾಲೂಕು ದಂಡಾಧಿಕಾರಿ ಕಿರಣ್‌ಗೌರಯ್ಯ, ಆಡಳಿತಾಧಿಕಾರಿ ಡಾ.ಚೇತನ್‌ಕುಮಾರ್, ಪ್ರಾಥಮಿಕ ವೈದ್ಯಾಧಿಕಾರಿ ಸಮ್ನಾ, ಪಂಚಾಯಿತಿ ಸದಸ್ಯರಾದ ಶಬ್ಬೀರ್, ಸಬಾಸ್ಟೀನ್, ರೇಷ್ಮಾ, ಮಾಜಿ ಅಧ್ಯಕ್ಷರಾದ ಕೆ.ಇ.ಕರೀಂ, ರೋಸ್‌ಮೇರಿ ರೋಡ್ರಿಗಸ್, ಮರಿಯಾ, ಯುವ ಕಾಂಗ್ರೆಸ್ ಅಧ್ಯಕ್ಷ ಅನೂಪ್, ಜಿಪಂ ಮಾಜಿ ಸದಸ್ಯ ಭಾನುಮತಿ, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ರಜಾಕ್, ಪಕ್ಷದ ಹಿರಿಯ ಮುಖಂಡ ಎಂ.ಎ.ವಸಂತ ಮತ್ತಿತರರು ಇದ್ದರು.