ಮೈಸೂರು: ಸ್ವಚ್ಛ ಮತ್ತು ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಎಲ್ಲರೂ ಬೆಂಬಲಿಸಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಮನವಿ ಮಾಡಿದರು.
ಕೆಆರ್‌ಎಸ್ ಪಕ್ಷದಿಂದ ಕರ್ನಾಟಕಕ್ಕಾಗಿ ನಾವು ಎನ್ನುವ ಹೆಸರಿನಲ್ಲಿ ರಾಜ್ಯವ್ಯಾಪಿ ಆಯೋಜಿಸಿರುವ ಬೈಕ್ ಜಾಥಾ ಗುರುವಾರ ನಗರಕ್ಕೆ ಆಗಮಿಸಿ ವಿವಿಧೆಡೆ ಸಂಚರಿಸಿತು.
ಬೆಂಗಳೂರಿನ ದೇವನಹಳಿಯಲ್ಲಿ ಪ್ರಾರಂಭವಾದ ಬೈಕ್ ಮೈಸೂರು ತಲುಪಿ ಟೌನ್‌ಹಾಲ್ ಮುಂದೆ ತಲುಪಿತು. ಈ ಸಂದರ್ಭದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.
ಭ್ರಷ್ಟರನ್ನು, ಅಪ್ರಾಮಾಣಿಕರನ್ನು, ಸ್ವಜನ ಪಕ್ಷಪಾತಿಗಳನ್ನು, ಅನೈತಿಕ ನಡವಳಿಕೆ ಉಳ್ಳವರನ್ನು, ಸುಳ್ಳರನ್ನು, ಸವಾಜಘಾತುಕ ಶಕ್ತಿಗಳನ್ನು, ಕುಟುಂಬ ರಾಜಕಾರಣ ಮಾಡುವವರಿಗೆ ಮತದಾರರು ಬುದ್ಧಿ ಕಲಿಸಬೇಕು ಎಂದರು.
ಮೈಸೂರು ರಾಜ್ಯಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್‌ಎಂ.ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ ಅವರ ಕೊಡುಗೆ ಅಪಾರವಾಗಿದೆ ಎಂದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಭ್ರಷ್ಟಾಚಾರ, ಸ್ವಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜಾ.ದಳವನ್ನು ತಿರಸ್ಕರಿಸಿ ಮತ್ತು ರಾಜ್ಯದ ಏಕೈಕ ಪ್ರಾಮಾಣಿಕ ಮತ್ತು ಪ್ರಾದೇಶಿಕ ಪಕ್ಷವಾದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಸ್ವಚ್ಛ, ಪ್ರಾಮಾಣಿಕ, ಜನಪರ, ಪ್ರಾದೇಶಿಕ ರಾಜಕಾರಣದ ಕುರಿತು ಜನಜಾಗೃತಿ ಮೂಡಿಸಲು ಕರ್ನಾಟಕಕ್ಕಾಗಿ ನಾವು ಎನ್ನುವ ಹೆಸರಿನಲ್ಲಿ ರಾಜ್ಯವ್ಯಾಪಿ ಬೈಕ್ ಜಾಥಾ ಹಮ್ಮಿಕೊಂಡಿದೆ ಎಂದು ತಿಳಿಸಿದರು. ಉಪಾಧ್ಯಕ್ಷರಾದ ಲಿಂಗೇಗೌಡ, ಕಾರ್ಯದರ್ಶಿ ರಘು ಜಾಣಗೆರೆ, ಸೋಮ ಸುಂದರ್, ಜಂಟಿ ಕಾರ್ಯದರ್ಶಿ ರಘುಪತಿ ಭಟ್, ಸಂಘಟನಾ ಕಾರ್ಯದರ್ಶಿಗಳಾದ ಜೀವನ್, ಚಂದ್ರಶೇಖರ್, ಬಿ.ಜಿ.ಕುಂಬಾರ, ಜಿಲ್ಲಾಧ್ಯಕ್ಷ ಸುಂದರ ಪ್ರೇಮ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾ.ಸ.ಪ್ರವೀಣ್ ಇತರರಿದ್ದರು.