ಬೆಳಗಾವಿ: ಕಲಬುರಗಿ ಜಿಲ್ಲೆ ಶಹಾಪುರದ ಶರಣ ಸಾಹಿತಿ ವಿಶ್ವರಾಧ್ಯ ಸತ್ಯಂಪೇಟ ಅವರ ವಿರುದ್ಧ ದಾಖಲಿಸಲಾದ ಪ್ರಕರಣ ರದ್ದು ಪಡಿಸುವಂತೆ ಆಗ್ರಹಿಸಿ ಜಾಗತಿಕ ಲಿಂಗಾಯತ ಮಹಾಸಭೆ, ರಾಷ್ಟ್ರೀಯ ಬಸವ ಸೇನೆ ಹಾಗೂ ಬಸವಪರ ಸಂಘಟನೆಗಳ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸತ್ಯಂಪೇಟ ಪ್ರಗತಿಪರ ಚಿಂತನೆಗಳ ಮೂಲಕ ನಾಡಿನಾದ್ಯಂತ ಬಸವ ತತ್ತ್ವಗಳ ಬಗ್ಗೆ ಹಾಗೂ ಮೂಢನಂಬಿಕೆಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು.
ವೈಚಾರಿಕ ಚಿಂತಕ ಹಾಗೂ ಶರಣ ಸಾಹಿತಿ ವಿಶ್ವರಾಧ್ಯ ಸತ್ಯಂಪೇಟ ಅವರ ವಿರುದ್ಧ ದುರುದ್ದೇಶದಿಂದ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಬಸವ ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ರೊಟ್ಟಿ, ರಾಷ್ಟ್ರೀಯ ಬಸವ ಸೇನೆಯ ಜಿಲ್ಲಾಧ್ಯಕ್ಷ ಶಂಕರ ಗುಡಸ, ಜಾಗತಿಕ ಲಿಂಗಾಯತ ಮಹಾಸಭೆಯ ಆನಂದ ಕರ್ಕಿ ಮತ್ತಿತರರು ಉಪಸ್ಥಿತರಿದ್ದರು.