ಮಂಡ್ಯ: ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಸಕಾಲದಲ್ಲಿ ಪಾವತಿಸದೆ ರಾಜ್ಯ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಫ್ಯಾಕ್ಟರಿ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿನಿಯರು, ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿದ್ಯಾರ್ಥಿ ವೇತನ ಪಾವತಿಸದೆ ಶಿಕ್ಷಣ ವಂಚಿತರನ್ನಾಗಿ ಮಾಡುತ್ತಿದೆ. ಹಿಂದುಳಿದ, ಸಮಾಜ ಕಲ್ಯಾಣ, ಆಯುಷ್, ತಾಂತ್ರಿಕ ಶಿಕ್ಷಣ ಹಾಗೂ ಇತರ ಇಲಾಖೆಗಳ ಅಡಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ 2022-23ನೇ ಸಾಲಿನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಂಜೂರಾದ ವಿದ್ಯಾರ್ಥಿ ವೇತನವನ್ನು ತಡೆಹಿಡಿದು ಸರ್ಕಾರ ಅನ್ಯ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಒಟ್ಟಾರೆ ನಾಲ್ಕು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ವೇತನವನ್ನು ತಡೆಹಿಡಿಯಲಾಗಿದೆ. ಎಸ್‌ಎಸ್‌ಪಿ ತಂತ್ರಾಂಶದಲ್ಲಿ ವಿದ್ಯಾರ್ಥಿ ವೇತನ ಮಂಜೂರಾಗಿದೆ ಎಂದು ತೋರಿಸುತ್ತಿದೆ. ಆದರೆ ವಿದ್ಯಾರ್ಥಿಗಳ ಖಾತೆಗೆ ಹಣ ಜಮೆಯಾಗಿಲ್ಲ. ಅಷ್ಟೇ ಅಲ್ಲದೆ ಹಣ ಜಮೆಯಾಗುವ ಮುನ್ನ ಮುಂದಿನ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿರುವುದು ಗೊಂದಲ ಉಂಟುಮಾಡಿದೆ. ರಾಜ್ಯ ಸರ್ಕಾರ ಸಕಾಲದಲ್ಲಿ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ಪಾವತಿಸುವ ಮೂಲಕ ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿಯ ಚಂದು, ಶ್ರೇಯಸ್, ಸುಗುಣ, ನೀತಮ್ ಇತರರಿದ್ದರು.