ವಿಜಯವಾಣಿ ಸುದ್ದಿಜಾಲ ಕಡಬ
ವಿದ್ಯಾರ್ಥಿಗಳು ಕೀಳರಿಮೆ ಬಿಟ್ಟು ಆತ್ಮವಿಶ್ವಾಸದಲ್ಲಿ ಮುನ್ನಡೆದಾಗ ಅಂದುಕೊಂಡ ಗುರಿ ತಲುಪಬಹುದು. ಶೈಕ್ಷಣಿಕ ಬದುಕಿನಲ್ಲಿ ಕೆಟ್ಟ ಚಟಗಳಿಗೆ ಬಲಿಯಾಗದೆ ಧನಾತ್ಮಕ ಚಿಂತನೆಯೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಅನಿಲ್‌ಕುಮಾರ್ ಎಸ್.ಎಸ್. ಹೇಳಿದರು.
ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಘಟಕ ಆಶ್ರಯದಲ್ಲಿ ಸೋಮವಾರ ಕಡಬ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ- 2025 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ ಮಾತನಾಡಿ, ಸಮಾಜದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ ಎಂದರು.
ಮಾಜಿ ಸಂಸದ ಕಾರ್ಯಕ್ರಮ ಉದ್ಘಾಟಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ.ಸವಣೂರು ಅಧ್ಯಕ್ಷತೆ ವಹಿಸಿದ್ದರು. ರಾಮಕುಂಜ ಗ್ರಾಪಂ ಅಧ್ಯಕ್ಷೆ ಸುಚೇತಾ ಬಿ., ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಅಜಿತ್ ಕುಮಾರ್ ಪಾಲೇರಿ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ವಸಂತ ಕುಮಾರ್, ಕನ್ನಡ ಮಾಧ್ಯಮ ಪ್ರೌಢಶಾಲಾ ಮುಖ್ಯ ಶಿಕ್ಷಕ ಸತೀಶ್ ಭಟ್ ಶುಭಹಾರೈಸಿದರು. ಪಿಯುಸಿ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಯೋಜಿಸಿದ್ದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಉಡುಪಿ ಪ್ರಾದೇಶಿಕ ಕಚೇರಿ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರತಿಜ್ಞಾ ಸಂಕಲ್ಪ ವಿಧಿ ಬೋಧಿಸಿದರು.
ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಬಿಳಿನೆಲೆ ವಲಯ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ ನಿರೂಪಿಸಿದರು. ಗೋಳಿತೊಟ್ಟು ಮೇಲ್ವಿಚಾರಕಿ ಜಯಶ್ರೀ ವಂದಿಸಿದರು.