ಯಳಂದೂರು: ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಅರ್ಹ ಕಾರ್ಮಿಕರು ಪಡೆದುಕೊಂಡು ತಮ್ಮ ಮಕ್ಕಳನ್ನು ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ತಿಳಿಸಿದರು.
ಅವರು ತಾಲೂಕು ಆಡಳಿತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಅಸಂಘಟಿತ ಕಾರ್ಮಿಕ ಕಟ್ಟಡ ಮಂಡಳಿ ಸಹಯೋಗದಲ್ಲಿ ಕಾರ್ಮಿಕರು ಹಾಗೂ ಸಾರ್ವಜನಿಕರಿಗೆ ಬುಧವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ತಾಲೂಕು ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಟ್ಟಡ ಕಾರ್ಮಿಕರು ಕಾರ್ಡ್‌ಗಳನ್ನು ಮಾಡಿಸಿಕೊಂಡು ಇದನ್ನು ಮತ್ತೆ ನವೀಕರಿಸಿಕೊಳ್ಳಬೇಕು, ಗುತ್ತಿಗೆದಾರರು ಹಾಗೂ ಕಾರ್ಮಿಕರು ಉತ್ತಮ ಸಂಬಂಧವನ್ನು ಇಟ್ಟುಕೊಳ್ಳಬೇಕು. ಕಾರ್ಮಿಕ ಇಲಾಖೆಯ ವತಿಯಿಂದ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೀಡಲಾಗುವ ವಿದ್ಯಾರ್ಥಿ ವೇತನ, ಆರೋಗ್ಯ ಸೇವೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಸವಿತಾ ಮಾತನಾಡಿ, ಅಸಂಘಟಿತ ಕಾರ್ಮಿಕರ ನೋಂದಣಿ, ಸ್ಮಾರ್ಟ್ ಕಾರ್ಡ್ ವಿತರಣೆ ಯೋಜನೆಯಡಿಯಲ್ಲಿ 20 ಅಸಂಘಟಿತ ವರ್ಗಗಳಿಗೆ ಉಚಿತ ನೋಂದಣಿ ಇದ್ದು ಸ್ಮಾರ್ಟ್ ಕಾರ್ಡನ್ನು ನೀಡಲಾಗುತ್ತದೆ. ನಮ್ಮ ಇಲಾಖೆಯ ವತಿಯಿಂದ ಕಾರ್ಮಿಕರಿಗೆ ಅನೇಕ ಸೌಲಭ್ಯಗಳಿಗೆ ಅಪಘಾತ ಪರಿಹಾರ ಸೌಲಭ್ಯ, ಸಹಜ ಮರಣ ಮತ್ತು ಅಂತ್ಯಕ್ರಿಯೆ ವೆಚ್ಚ ಸೇರಿದಂತೆ ಅನೇಕ ಯೋಜನೆಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಒದಗಿಸಿ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ತಹಸೀಲ್ದಾರ್ ಜಯಪ್ರಕಾಶ್, ಕಾರ್ಮಿಕ ನಿರೀಕ್ಷಕ ವಿ.ಎಲ್.ಪ್ರಕಾಶ್, ಸಂಪನ್ಮೂಲ ವ್ಯಕ್ತಿಗಳಾದ ರಾಜೇಶ್, ಎಂ.ಮಹೇಶ್, ತಾಪಂ ನರೇಗಾ ಸಹಾಯಕ ನಿರ್ದೇಶಕಿ ರಾಧಾ ಮತ್ತಿತರರು ಹಾಜರಿದ್ದರು.