ಜಿಲ್ಲೆ

ನೀರಿನ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ

Mysuru

ಮೈಸೂರು: ಬೇಸಿಗೆ ಕಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಸಾರ್ವಜನಿಕರಿಗೆ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.

ಜಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲೆಯ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ನೀರಿನ ಅಭಾವ ಕಂಡುಬರುವ ಮುನ್ಸೂಚನೆ ಇರುವ ಪ್ರದೇಶಗಳನ್ನು ಗುರುತಿಸಿ ಕೂಡಲೇ ಸ್ಪಂದಿಸಲು ಮುಂದಾಗಿ ಎಂದರು.

ಕಳೆದ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದ ಹಿನ್ನೆಲೆ ಅಂತರ್ಜಲ ಸಮೃದ್ಧಿಯಾಗಿದೆ. ಆದ್ದರಿಂದ ನೀರಿನ ಕೊರತೆ ಕಂಡುಬಂದ ಪ್ರದೇಶಗಳಲ್ಲಿ ಬೋರ್‌ವೆಲ್‌ಗಳ ಮೂಲಕ ನೀರನ್ನು ಒದಗಿಸಲು ಕಾರ್ಯ ಪ್ರವೃತ್ತರಾಗಬೇಕು. ಜಿಲ್ಲಾ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ವಾಸಿಸುವ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ತಿಳಿಸಿದರು.

ತಿ.ನರಸೀಪುರ, ಹುಣಸೂರು, ಪಿರಿಯಾಪಟ್ಟಣ, ಎಚ್.ಡಿ.ಕೋಟೆ, ಕೆ.ಆರ್.ನಗರ, ನಂಜನಗೂಡು ಸೇರಿದಂತೆ ಆಯಾ ತಾಲೂಕು ಅಧಿಕಾರಿಗಳು ನೀರಿನ ಅಭಾವ ಕಂಡುಬರುವ ಗ್ರಾಮಗಳನ್ನು ಗುರುತಿಸಿ ನೀರಿನ ಸೌಕರ್ಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಅನಿವಾರ್ಯವಾದರೆ ಖಾಸಗಿ ವಾಟರ್ ಟ್ಯಾಂಕ್ ಅನ್ನು ಬಾಡಿಗೆ ಪಡೆದು ನೀರನ್ನು ಸರಬರಾಜು ಮಾಡಬೇಕು ಎಂದು ಸೂಚಿಸಿದರು.

ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ವ್ಯತ್ಯಾಸದಿಂದ ಕಂಡುಬರುವ ಕಾಯಿಲೆಗಳ ಬಗ್ಗೆ ಆಯಾ ಸ್ಥಳೀಯ ಆಸ್ಪತ್ರೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕು. ಸಹಾಯವಾಣಿ ವ್ಯವಸ್ಥೆ ಮಾಡಬೇಕು ಎಂದು ಡಿಎಚ್‌ಒಗೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಜ್ಯೋತಿ, ಉಪವಿಭಾಗಾಧಿಕಾರಿ ಡಾ.ವೆಂಕಟರಾಜು, ಡಿಡಿಪಿಐ ಡಾ.ಪಾಂಡುರಂಗ ಇನ್ನಿತರರು ಪಾಲ್ಗೊಂಡಿದ್ದರು.