ಜಿಲ್ಲೆ

ಜಾತಿ ನಿಂಧನೆ ಪ್ರಕರಣ ಗಂಭೀರವಾಗಿ ಪರಿಗಣಿಸಿ : ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ

ಮೈಸೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟಪಂಗಡ ದೌರ್ಜನ್ಯ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ (ಅಟ್ರಾಸಿಟಿ) ದೌರ್ಜನ್ಯಕ್ಕೆ ಒಳಗಾದ ವರಿಗೆ ನ್ಯಾಯ ಕೊಡಿಸಲು ನಿರ್ಲಕ್ಷೃ ವಹಿಸಿದರೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಎಚ್ಚರಿಸಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆಡಳಿತ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೈಸೂರು ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿ ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಕೆ.ರಾಕೇಶ್ ಕುಮಾರ್ ಮಾತನಾಡಿ, ಮೈಸೂರು ವಿಭಾಗದಲ್ಲಿ ಕಳೆದ ವರ್ಷ 432 ಜಾತಿ ನಿಂದನೆ ಪ್ರಕರಣಗಳು ದಾಖಲಾಗಿದ್ದು, ಮೈಸೂರು, ಹಾಸನ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕೆಲವು ಪ್ರಕರಣಗಳಲ್ಲಿ 45 ದಿನಗಳಲ್ಲಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿಲ್ಲ. ಬಾಕಿ ಇರುವ ದೌರ್ಜನ್ಯ ಪ್ರಕರಣಗಳನ್ನು ಕೂಡಲೇ ಮರು ಪರಿಶೀಲಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ಜಾತಿ ನಿಂದನೆ ಪ್ರಕರಣ ದಾಖಲಿಸಿ ಶಿಕ್ಷೆ ಕೊಡಿಸುವುದು ಮುಖ್ಯವಲ್ಲ. ಜಾತಿ ನಿಂದನೆ ಆಗದ ರೀತಿಯಲ್ಲಿ ನೋಡಿಕೊಳ್ಳುವುದು ಮುಖ್ಯವಾಗಿದ್ದು, ಇದಕ್ಕೆ ಜನರ ಮನಪರಿವರ್ತನೆ ಮಾಡಬೇಕು. ಸಾರ್ವಜನಿಕರಿಗೆ ಕಾಯ್ದೆಯ ಉದ್ದೇಶಗಳನ್ನು ಅರ್ಥ ಮಾಡಿಸಬೇಕು. ಮಾನವ ಹಕ್ಕುಗಳ ಉಲ್ಲಂಘನೆ ತಡೆಯುವುದು ಈ ಕಾಯ್ದೆಯ ಉದ್ದೇಶವಾಗಿದೆ ಎಂದರು.

ದಲಿತರ ಹತ್ಯೆ ಪ್ರಕರಣಗಳು ನಡೆದರೆ ಕೂಡಲೇ ಪರಿಹಾರ ನೀಡಬೇಕು. ಜತೆಗೆ ಕುಟುಂಬದವರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಬೇಕು. ಈ ಕುರಿತು ಬಾಕಿ ಉಳಿದಿರುವ ಎಲ್ಲ ಪ್ರಕರಣಗಳನ್ನು ಕೂಡಲೇ ಇತ್ಯರ್ಥ ಪಡಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಕೆ.ರಾಕೇಶ್ ಕುಮಾರ್ ನಿರ್ದೇಶನ ನೀಡಿದರು.

ಅಂತರ್ಜಾತಿ ವಿವಾಹವಾಗುವವರಿಗೆ ಹಾಗೂ ಅವರ ಕುಟುಂಬದವರಿಗೆ ರಕ್ಷಣೆ ಕೊಡಬೇಕು. ಚಾಮರಾಜನಗರ ಜಿಲ್ಲೆಯಲ್ಲಿ ಅಂತರ್ಜಾತಿ ವಿವಾಹವಾದ ಕುಟುಂಬದವರಿಗೆ ಸಾಮಾಜಿಕ ಬಹಿಷ್ಕಾರ ಹಾಗೂ ದಂಡ ಹಾಕುವ ಪ್ರಕರಣಗಳು ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್‌ಗೆ ಸೂಚನೆ ನೀಡಿದರು.