ವಿಜಯಪುರ: ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿ, ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿ ಪ್ರಕರಣಗಳನ್ನು ಅತ್ಯಂತ ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ದೌರ್ಜನ್ಯ ಪ್ರಕರಣಗಳನ್ನು ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳ ಪರಿಹಾರ ಧನವನ್ನು ಆದ್ಯತೆ ಮೇಲೆ ಸಂತ್ರಸ್ತರಿಗೆ ಬಿಡುಗಡೆ ಮಾಡಲು ಕ್ರಮ ವಹಿಸಬೇಕು. ನಿಯಮಾನುಸಾರ ಹಾಗೂ ಪ್ರಕರಣಾನುಸಾರ ಕಾಲಮಿತಿಯೊಳಗೆ ಪರಿಹಾರ ಧನ ಒದಗಿಸಬೇಕು. ಯಾವುದೇ ಬಾಕಿ ಉಳಿಸಿಕೊಳ್ಳದಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ವಿವಿಧ ನಿಗಮಗಳು ಭೂ ಒಡೆತನ ಯೋಜನೆಯಡಿಯ ಫಲಾನುಭವಿಗಳ ಮಾಹಿತಿಯನ್ನು ಇಂದೀಕರಣ ಮಾಡಿ, ಆದ್ಯತೆಯ ಮೇಲೆ ಅನುಪಾಲನಾ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪರಿಶಿಷ್ಟ ಜಾತಿ ಕಾಲನಿ ಸೇರಿದಂತೆ ಎಲ್ಲ ಕಡೆ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗದ ಆರ್ಥಿಕ ಮಟ್ಟ ಸುಧಾರಿಸಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕಾರ್ಯನಿರ್ವಹಿಸಿ ಈ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಜಾರಿಗೊಳಿಸಲಾದ ಯೋಜನೆಗಳ ಲಾಭ ದೊರಕಿಸಲು ಕ್ರಮ ವಹಿಸಬೇಕು. ಎಲ್ಲ ಇಲಾಖೆಗಳಲ್ಲಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವ ಮೂಲಕ ಅರ್ಹರಿಗೆ ಲಾಭ ದೊರಕಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಎಸ್‌ಸಿ-ಎಸ್‌ಟಿ ಕಾಯ್ದೆ ಹಾಗೂ ಪೋಕ್ಸೊ (ಎಸ್‌ಸಿ-ಎಸ್‌ಟಿ) ಕಾಯ್ದೆಯಡಿ ಜಿಲ್ಲೆಯಲ್ಲಿ ಕಳೆದ 2024 ರಿಂದ ಫೆಬ್ರವರಿ-2025ರವರೆಗೆ ದಾಖಲಾದ 265 ಪ್ರಕರಣಗಳ ಪೈಕಿ 1 ಪ್ರಕರಣದಲ್ಲಿ ಶಿಕ್ಷೆಯಾಗಿದ್ದು, 34 ಪ್ರಕರಣಗಳನ್ನು ಬಿಡುಗಡೆಗೊಳಿಸಿದ್ದು, 37 ಪ್ರಕರಣಗಳು ವಿಲೇವಾರಿ ಮಾಡಲಾಗಿದೆ. ತಿಂಗಳ ಅಂತ್ಯದಲ್ಲಿ ಒಟ್ಟು 229 ಪ್ರಕರಣಗಳು ಬಾಕಿ ಉಳಿದಿವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಜಿಪಂ ಸಿಇಒ ರಿಷಿ ಆನಂದ, ಎಸ್‌ಪಿ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಪಂ ಉಪ ಕಾರ್ಯದರ್ಶಿ ವಿಜುಕುಮಾರ ಅಜೂರ, ಜಿಪಂ ಮುಖ್ಯ ಕಾರ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಅಶೋಕ ಘೋಣಸಗಿ, ಕೃಷಿ ಜೆಡಿ ಎಲ್.ರೂಪಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲಿಕ ಮಾನವರ, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಅಭಿಷೇಕ ಚಕ್ರವರ್ತಿ, ಮದನಕುಮಾರ ನಾಗರದಿನ್ನಿ, ನಿರ್ಮಲಾ ಹೊಸಮನಿ, ಸಿದ್ದು ರಾಯಣ್ಣವರ, ಬಂದಗಿ ಸಿದ್ದಪ್ಪ ಗಸ್ತಿ, ಯಮನಪ್ಪ ಸಿದರಡ್ಡಿ, ಮಹಾಂತೇಶ ಸಾಸಬಾಳ, ಮಲ್ಲು ತಳವಾರ, ರಾಜಶೇಖರ ಚೌರ, ನಾನು ಸೋಮು ಲಮಾಣಿ ಮತ್ತಿತರರಿದ್ದರು.