ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಬಿ.ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ಕುರಿಯ ಪ್ರಶಸ್ತಿ ಪ್ರದಾನಿಸಲಾಯಿತು.  
ಜಿಲ್ಲೆ

ಬುದ್ಧಿಗೆ ಗ್ರಾಸ ಒದಗಿಸುವ ತಾಳಮದ್ದಳೆ : ಎಡನೀರು ಶ್ರೀ ಅಭಿಮತ

ಸೌಮ್ಯ ಆರ್

ಪುತ್ತೂರು: ಯಕ್ಷಗಾನ ಬಯಲಾಟಗಳು ಮನಸ್ಸಿಗೆ ಮುದವನ್ನು ನೀಡಿದರೆ, ತಾಳಮದ್ದಳೆ ಬುದ್ಧಿಗೆ ಗ್ರಾಸ ಒದಗಿಸುತ್ತದೆ. ಭಾಷಾ ಶುದ್ಧತೆ, ಪುರಾಣ ಜ್ಞಾನ, ಅಂದವಾಗಿ ಮಾತನಾಡುವ ಶಕ್ತಿ, ಗ್ರಹಿಕಾ ಸಾಮರ್ಥ್ಯ ಮತ್ತು ಬದುಕಿಗೆ ಬೇಕಾದ ಸಂದೇಶಗಳನ್ನು ಯಕ್ಷಗಾನ ಒದಗಿಸುತ್ತದೆ. ಅಕ್ಷರಾಭ್ಯಾಸ ಇಲ್ಲದವರೂ ಆಟ, ಕೂಟಗಳನ್ನು ನೋಡಿಯೇ ಪುರಾಣ ಜ್ಞಾನವನ್ನು ಪಡೆದವರಿದ್ದಾರೆ. ಅದು ಯಕ್ಷಗಾನದ ಶಕ್ತಿ ಎಂದು ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು ನುಡಿದರು.

ಪುತ್ತೂರಿನ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಸಭಾವನದಲ್ಲಿ ಜರುಗಿದ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ಪುತ್ತೂರು ಮುಳಿಯ ಜ್ಯುವೆಲ್ಲರ್ಸ್ ಆಡಳಿತ ನಿರ್ದೇಶಕ ಮುಳಿಯ ಕೇಶವ ಪ್ರಸಾದ್, ಯಕ್ಷಗಾನ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಷಿಯವರು ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಿದರು.

ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೀರ್ತಿಶೇಷ ಭಾಗವತ ಪದ್ಯಾಣ ಗಣಪತಿ ಭಟ್ಟರು ಕಾಲಮಿತಿ ಪ್ರದರ್ಶನವನ್ನು ಯಶಸ್ವಿಯಾಗಿ ನಿಭಾಯಿಸಿದವರು. ಪದ್ಯಾಣ ಮತ್ತು ಕುರಿಯ ಮನೆತನಗಳ ಯಕ್ಷಗಾನೀಯ ಕೊಡುಗೆಗಳಲ್ಲಿ ಸಮರ್ಪಣಾ ಭಾವವಿರುವುದನ್ನು ಕಾಣಬಹುದು ಎಂದರು.

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕ ಉಜಿರೆ ಅಶೋಕ ಭಟ್, ಶೀಲಾ ಗಣಪತಿ ಭಟ್ ಉಪಸ್ಥಿತರಿದ್ದರು. ಕಲಾವಿದ, ಲೇಖಕ ನಾ. ಕಾರಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿದರು. ಪದ್ಯಾಣ ಪ್ರಶಸ್ತಿ ಸಮಿತಿಯ ಸ್ವಸ್ತಿಕ್ ಪದ್ಯಾಣ ವಂದಿಸಿದರು. ಗಂಗಾ ಸಾರಥ್ಯ ಪ್ರಸಂಗದ ತಾಳಮದ್ದಳೆ ನಡೆಯಿತು.

ಪ್ರಶಸ್ತಿ ಪ್ರದಾನ

ಪದ್ಯಾಣ ಮನೆತನದ ಹಿರಿಯ ಪುಟ್ಟು ನಾರಾಯಣ ಭಾಗವತರ ಸ್ಮತಿಯಲ್ಲಿ ನೀಡುವ ಪದ್ಯಾಣ ಪ್ರಶಸ್ತಿಯನ್ನು ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಹಾಗೂ ಕುರಿಯ ವಿಠಲ ಶಾಸ್ತ್ರಿ ನೆನಪಿನ ಕುರಿಯ ಪ್ರಶಸ್ತಿಯನ್ನು ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಬಿ.ಸೀತಾರಾಮ ತೋಳ್ಪಾಡಿತ್ತಾಯರಿಗೆ ಶ್ರೀಗಳು ಪ್ರದಾನಿಸಿದರು. ಕುರಿಯ ಸ್ಮತಿ ಗೌರವವನ್ನು ಯಕ್ಷಗಾನ ಅರ್ಥದಾರಿಗಳಾದ ಕೆ.ಭಾಸ್ಕರ ರಾವ್ ಹಾಗೂ ಭಾಸ್ಕರ ನೂರಿತ್ತಾಯ ಬಾರ್ಯಗೆ ನೀಡಲಾಯಿತು.