ಚಿತ್ರದುರ್ಗ: ಮುಂದಿನ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಜಿಲ್ಲೆಯಲ್ಲಿ ಪಕ್ಷ ಸಂಘಟಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಡಿ. ಲಾಡ್ ಅವರು ಮುಖಂಡರು ಮತ್ತು ಕಾರ್ಯಕರ್ತರಿಗೆ ಸಲಹೆ ನೀಡಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿ, ಕಾರ್ಯಕರ್ತರ ಪರಿಶ್ರಮದಿಂದಲೇ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಪಕ್ಷ ನೀಡಿದ ಗ್ಯಾರಂಟಿ ಭರವಸೆಗಳನ್ನು ಈಡೇರಿಸಲಾಗಿದೆ. ಪಕ್ಷ ಮತ್ತೊಂದು ಅವಧಿಗೂ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಆರು ಕ್ಷೇತ್ರಗಳ ಪೈಕಿ ಐದರಲ್ಲಿ ಗೆಲುವು ಸಾಧಿಸಲಾಗಿದೆ. ಮುಂದಿನ ಚುನಾವಣೆಯಲ್ಲಿ ಆರೂ ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಬೇಕಿದೆ ಎಂದು ಕಾರ್ಯಕರ್ತರಿಗೆ ಹುರುಪು ತುಂಬಿದರು.
ಮಾಜಿ ಸಚಿವ ಎಚ್. ಆಂಜನೇಯ ಅವರು ನಮ್ಮೊಂದಿಗೆ ವಿಧಾನಸಭೆಯಲ್ಲಿ ಇರಬೇಕಿತ್ತು, ಆದರೆ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯಲ್ಲಿ ಅವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಲಾಡ್ ಶ್ಲಾಘಿಸಿದರು.
ಮಾಜಿ ಸಚಿವ ಎಚ್. ಅಂಜನೇಯ ಮಾತನಾಡಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಜಂಟಿ ನಾಯಕತ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದರು.
ಗ್ಯಾರಂಟಿಗಳಿಂದ ಅಭಿವೃದ್ಧಿ ಆಗುತ್ತಿಲ್ಲ ಎಂದು ಬಿಜೆಪಿ ಬೊಬ್ಬೆ ಹೊಡೆಯುತ್ತಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಿದ್ದಾರೆ. ಸಂತೋಷ್ ಲಾಡ್ ಅವರು ಕಾರ್ಮಿಕ ಸಚಿವರಾಗಿ ಉತ್ತಮ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದಾರೆ ಎಂದು ಪ್ರಶಂಸಿಸಿದರು.
ಡಿಸಿಸಿ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ಮಾಜಿ ಎಂಎಲ್‌ಸಿ ಜಯಮ್ಮ ಬಾಲರಾಜ್, ಸಂಪತ್‌ಕುಮಾರ್, ಡಿ.ಎನ್. ಮೈಲಾರಪ್ಪ, ಆರ್. ಶಿವಣ್ಣ, ಲಕ್ಷ್ಮೀಕಾಂತ್, ಜೆಜೆಹಟ್ಟಿ ತಿಪ್ಪೇಸ್ವಾಮಿ, ಒ. ಶಂಕರ್, ಅಂಜಿನಪ್ಪ, ಜಾಕಿರ್‌ಹುಸೇನ್, ಟಿಪ್ಪುಖಾಸಿಂ ಆಲಿ, ಡಾ. ಯೋಗೀಶ್‌ಬಾಬು, ಪ್ರಕಾಶ್, ಶಿವಲಿಂಗಪ್ಪ, ಮಂಜುನಾಥ್ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.