ಸಮೀಪದ ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ ಅಮರಾಪೂರ ಗ್ರಾಮದಲ್ಲಿ ಬೇಸಿಗೆ ಆರಂಭ ಮುನ್ನವೇ ಜನರು ಕುಡಿಯುವ ನೀರಿಗಾಗಿ ಪರದಾವು ಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ.
ಅಮರಾಪೂರು ಗ್ರಾಮದಲ್ಲಿ ನೂರಾರು ಕುಟುಂಬಗಳಿದ್ದು, ಸಾವಿರಾರು ಜನರು ವಾಸ ಮಾಡುತ್ತಿದ್ದಾರೆ. ಕಳೆದ ಒಂದು ವಾರದಿಂದ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಗ್ರಾಮದ ಹೊರವಲಯದಲ್ಲಿ ಕೊಳವೆಬಾವಿ ಇದ್ದು, ನೀರಿಗಾಗಿ ನಿತ್ಯ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಕೊಡ ನೀರಿಗಾಗಿ ಗಂಟೆಗಟ್ಟಲೆ ಕಾಯುವಂತಾಗಿದೆ. ಗ್ರಾಮಕ್ಕೆ ನೀರು ಪೂರೈಕೆ ಮಾಡುವ ಕೊಳವೆ ಬಾವಿಯಲ್ಲಿ ಅಂತರ್ಜಲ ಮಟ್ಟ ಕುಸಿತವಾಗಿದ್ದು, ಸಮಸ್ಯೆಗೆ ಮೂಲ ಕಾರಣ ಎನ್ನಲಾಗುತ್ತಿದೆ.
ಆದಷ್ಟು ಬೇಗನೆ ಸಮರ್ಪಕವಾಗಿ ನೀರು ಪೂರೈಕೆ ಮಾಡಬೇಕು ಎಂದು ಗ್ರಾಮಸ್ಥರಾದ ರವಿಕುಮಾರ, ಬಸವರಾಜ , ವೀರಣ್ಣ, ಶಾಮಣ್ಣ ಆಗ್ರಹಿಸಿದ್ದಾರೆ.