ಮೂಲ್ಕಿ: ಶಿಕ್ಷಕರು ವಿದ್ಯಾರ್ಥಿಗಳ ಜೀವನ ರೂಪಿಸುವ ಶಿಲ್ಪಿಗಳಾಗಿದ್ದು ಅವರನ್ನು ಗೌರವಿಸುವುದು ಸಮಾಜದ ಕರ್ತವ್ಯ ಎಂದು ಮೂಲ್ಕಿ ಶ್ರೀ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಹರೀಂದ್ರ ಸುವರ್ಣ ಹೇಳಿದರು.
ಯುವವಾಹಿನಿ ಮೂಲ್ಕಿ ಘಟಕ ಮತ್ತು ನಾರಾಯಣ ಗುರು ವಿದ್ಯಾ ಸಂಸ್ಥೆ ವತಿಯಿಂದ ಶಿಕ್ಷಕರ ದಿನಾಚರಣೆ-2025 ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಗೌರವಿಸಿ ಮಾತನಾಡಿದರು.
ಶಾಲೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಶಿಕ್ಷಕಿಯರಾದ ಶೈಲಶ್ರೀ ಮತ್ತು ಸುನಿತಾ ಅವರನ್ನು ಸನ್ಮಾನಿಸಲಾಯಿತು. ಎಲ್ಲ ಶಿಕ್ಷಕ ಮತ್ತು ಶಿಕ್ಷಕಿಯರನ್ನು ಗೌರವಿಸಲಾಯಿತು.
ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷ ವಿನಯ ಕುಮಾರ್ ಮಟ್ಟು ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಶಾಲಾ ಕಾರ್ಯದರ್ಶಿ ಬಾಲಚಂದ್ರ ಸನಿಲ್, ಆಡಳಿತಾಧಿಕಾರಿ ಮಂಜುಳಾ ಕೆ.ವಿ., ಪ್ರಾಂಶುಪಾಲ ಯತೀಶ್ ಅಮೀನ್, ಮುಖ್ಯಶಿಕ್ಷಕಿ ಗೀತಾ ಶೆಟ್ಟಿ, ಯೋಗೀಶ್ ಕೋಟ್ಯಾನ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರಾವ್ಯ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಅನುಷಾ ವಂದಿಸಿದರು.