ಬೆಂಗಳೂರು: ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದ್ದು, ಶಿಕ್ಷಕರು ಮಕ್ಕಳನ್ನು ತಾಳ್ಮೆಯಿಂದ ತಿದ್ದಿ, ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ ದಯಾನಂದ ಹೇಳಿದರು.
ಭಾರತ ರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನಾಚರಣೆ ಅಂಗವಾಗಿ ಬೆಂ.ನಗರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಶಿಕ್ಷಕರ ಸದನದಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಿಕ್ಷಕರು ಶಾಲೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ, ಅವರನ್ನು ಸುಧಾರಿಸಿ ಶಿಕ್ಷಣದಲ್ಲಿ ಆಸಕ್ತಿ ಹೊಂದುವಂತೆ ಮಾಡುವುದು ಶಿಕ್ಷಕರ ಆದ್ಯ ಕರ್ತವ್ಯವಾಗಬೇಕು ಹಾಗೂ ಮಕ್ಕಳೊಂದಿಗೆ ಸ್ನೇಹ ಬಾಂಧವ್ಯ ಬೆಳಸಿಕೊಂಡು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಎಂದು ಶಿಕ್ಷಕರಿಗೆ ಸಲಹೆ ನೀಡಿದರು.
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಣಾಧಿಕಾರಿಗಳಾದ ಕೆ.ಎಸ್. ಲತಾಕುಮಾರಿ ಮಾತನಾಡಿ, ಶಿಕ್ಷಕರು ಮಾನಸಿಕ ಒತ್ತಡದಲ್ಲಿ ಸಹ ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದು. ತಾಳ್ಮೆಯಿಂದ ಮಕ್ಕಳಿಗೆ ಭೋದಿಸುತ್ತಾರೆ. ಈ ದೇಶದ ಆಸ್ತಿ ವಿದ್ಯಾರ್ಥಿಗಳು ಅವರನ್ನು ಸರಿಯಾದ ಮಾರ್ಗದಲ್ಲಿ ನಡೆಸುವುದು ಶಿಕ್ಷಕರ ಜವಾಬ್ದಾರಿಯಾಗಿರುತ್ತದೆ. ಯಾವುದೇ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತಿಲ್ಲ. ಈ ವರ್ಷ ರಾಜ್ಯದಲ್ಲಿ ಶೇ.100 ಫಲಿತಾಂಶ ಪಡೆಯುವಂತಾಗಬೇಕು ಎಂದು ಶಿಕ್ಷಕರಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆಯನ್ನು ಸಲ್ಲಿಸಿದ 12 ಶಿಕ್ಷಕರನ್ನು ಗೌರವಿಸಿ ಅತ್ಯುತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ವರ್ತೂರು ಪ್ರಥಮ ದರ್ಜೆ ಕಾಲೇಜಿನ ಪ್ರಾಶುಂಪಾಲರಾದ ಡಾ.ಚಂದ್ರಪ್ಪ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.