ಮೈಸೂರು: ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಸರಬರಾಜು ಮಾಡುತ್ತಿರುವ ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕುರಿತು ಶನಿವಾರ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಕುಡಿಯುವ ನೀರಿಗೆ ಯಾವುದೇ ಕಲುಷಿತ ನೀರು ಸೇರ್ಪಡೆಯಾಗದಂತೆ ಎಚ್ಚರ ವಹಿಸಬೇಕು ಎಂದರು.
ನೀರು ಸರಬರಾಜು ವ್ಯವಸ್ಥೆಯಲ್ಲಿರುವ ಎಲ್ಲ ನೀರು ಶೇಖರಣಾ ಘಟಕಗಳನ್ನು ಸ್ವಚ್ಛಗೊಳಿಸಿ ಪ್ರತಿ ಹಂತದಲ್ಲೂ ಕ್ಲೋರಿನೇಷನ್ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ನೀರಿನ ಮೂಲಗಳಾದ ಕೊಳವೆ ಬಾವಿಗಳ ಸುತ್ತಮುತ್ತಲೂ ಯಾವುದೇ ಕಲುಷಿತ ಅಥವಾ ಚರಂಡಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಮಾಡಬೇಕು. ನೀರಿನ ಮೂಲದ ಸುತ್ತ ಕಾಂಕ್ರೀಟ್ ಕಟ್ಟೆ ಕಟ್ಟಲು ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಪರೀಕ್ಷೆ ನಡೆಸದೆ ಕುಡಿಯುವ ನೀರು ಸರಬರಾಜು ಮಾಡಿ ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ತೊಂದರೆ ಉಂಟಾದಲ್ಲಿ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗ್ರಾಮಗಳಲ್ಲಿ ಸ್ವಚ್ಛತೆ, ಚರಂಡಿಗಳ ನಿರ್ವಹಣೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು. ಹೋಟೆಲ್, ರಸ್ತೆಯ ಬದಿಯ ಫಾಸ್ಟ್‌ಫುಡ್ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ತಿಳಿಸಬೇಕು. ಶುದ್ಧ ಕುಡಿಯುವ ನೀರು ಒದಗಿಸುವಂತೆ ಕಟ್ಟುನಿಟ್ಟಿನ ಸೂಚನೆ ಕೊಡಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಡೆಂೆ, ಚಿಕೂನ್‌ಗುನ್ಯಾ ವ್ಯಾಪಿಸದಂತೆ ತೀವ್ರ ನಿಗಾ ವಹಿಸಬೇಕು. ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯತೆಯೊಂದಿಗೆ ಕೆಲಸ ನಿರ್ವಹಿಸಬೇಕು ಎಂದು ಡಿಸಿ ತಿಳಿಸಿದರು.
ನೀರಿನ ವ್ಯವಸ್ಥೆಯಡಿ ಬರುವ ಎಲ್ಲ ಪೈಪ್‌ಲೈನ್‌ಗಳನ್ನು ಪ್ರತಿದಿನವೂ ಕಣ್ಗಾವಲು ನಡೆಸಬೇಕು. ಪೈಪ್‌ಲೈನ್ ಹಾನಿಯಾಗಿದ್ದರೆ ಕಲುಷಿತ ನೀರು ಕುಡಿಯುವ ನೀರಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಗಮನ ವಹಿಸಿ ದುರಸ್ತಿ ಕಾರ್ಯ ನಡೆಯಬೇಕು ಎಂದರು.
ಒಂದು ವೇಳೆ ನಗರ ಪ್ರದೇಶಗಳಲ್ಲಿ ಕರುಳು ಬೇನೆ, ವಾಂತಿ, ಭೇದಿ ಪ್ರಕರಣಗಳು ಕಂಡು ಬಂದರೆ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಆ ಗ್ರಾಮಕ್ಕೆ ಭೇಟಿ ನೀಡಿ, ಅಗತ್ಯ ಕ್ರಮ ವಹಿಸಬೇಕು. ತಾಲೂಕಿನ ಆಸ್ಪತ್ರೆ ಹಾಗೂ ಕ್ಲಿನಿಕ್‌ಗಳಲ್ಲಿ ಕರುಳು ಬೇನೆ ಪ್ರಕರಣಗಳು ಬಂದರೆ ಮಾಹಿತಿ ನೀಡುವಂತೆ ಹಾಗೂ ಆ ಸಂಬಂಧ ಅಗತ್ಯ ಕ್ರಮ ವಹಿಸಲು ಮುಂದಾಗಬೇಕು ಎಂದು ತಿಳಿಸಿದರು.
ಕುಡಿಯುವ ನೀರು ಸರಬರಾಜಿನ ಕೊಳವೆ ಮಾರ್ಗಗಳು ಒಡೆದು ಹೋದಲ್ಲಿ ತಕ್ಷಣ ದುರಸ್ತಿ ಪಡಿಸಲು ಕ್ರಮ ವಹಿಸಬೇಕು. ಹೊರಗಿನ ಇತರ ವಸ್ತುಗಳು, ಕುಡಿಯುವ ನೀರಿನ ಸರಬರಾಜಿನ ಪೈಪ್‌ಲೈನ್ ಒಳಗೆ ಕೊಳಚೆ ನೀರು ಸೇರದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಸರ್ಕಾರದ ವಿವಿಧ ಯೋಜನೆಯಡಿ ಕುಡಿಯುವ ನೀರನ್ನು ಸರಬರಾಜು ಮಾಡಲು ನಿರ್ಮಿಸಿರುವ ಓವರ್‌ಹೆಡ್ ಟ್ಯಾಂಕ್‌ಗಳ ನೀರಿನ ಗುಣಮಟ್ಟದ ಪರೀಕ್ಷೆ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ ಮಾತನಾಡಿ, ಸ್ವಚ್ಛನೀರು, ಸ್ವಚ್ಛ ವಾತಾವರಣ ನೀಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಮಳೆಗಾಲ ಆರಂಭವಾಗುವುದರಿಂದ ಚರಂಡಿ ಸ್ವಚ್ಛತೆ ಹಾಗೂ ಗ್ರಾಮಗಳಲ್ಲಿ ಶುಚಿತ್ವದ ಅರಿವು ಮೂಡಿಸುವಂತೆ ತಿಳಿಸಿದರು.
ಹುಣಸೂರು ಉಪವಿಭಾಗಾಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.