ಜಿಲ್ಲೆ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ

ಮಂಜುನಾಥ ಅಂಗಡಿ

ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ. ನಿಗದಿತ ಪರೀಕ್ಷೆಗೆ ಅಗತ್ಯ ಮಾಹಿತಿ ಕಲೆ ಹಾಕಿಕೊಳ್ಳಬೇಕು. ಪೂರಕ ಅಧ್ಯಯನಕ್ಕೂ ಮಹತ್ವ ನೀಡಬೇಕು ಎಂದು ಹಿರಿಯ ಸಂಪನ್ಮೂಲ ವ್ಯಕ್ತಿ ಖಾನ್ ಕಟ್ಟಿಮನಿ ಹೇಳಿದರು.
ನಗರದ ಕ್ಲಾಸಿಕ್ ಕೆಎಎಸ್, ಐಎಎಸ್ ಸ್ಟಡಿ ಸರ್ಕಲ್ ಸಂಸ್ಥೆಯಲ್ಲಿ 6ರಿಂದ 8ನೇ ತರಗತಿ ಬೋಧಿಸುವ ಶಿಕ್ಷಕರ ನೇಮಕಾತಿ ಪ್ರವೇಶ ಪರೀಕ್ಷೆಗಾಗಿ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕುರಿತು ಭಾನುವಾರ ಆಯೋಜಿಸಿದ್ದ ಉಚಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅತಿಥಿ ಉಪನ್ಯಾಸಕ ಡಾ. ಶಿವಾನಂದ ಟವಳಿ ಮಾತನಾಡಿ, ಶಿಕ್ಷಕ ವೃತ್ತಿ ಸಮಾಜದಲ್ಲಿ ಅತ್ಯಂತ ಗೌರವಾನ್ವಿತವಾದುದು. ಜ್ಞಾನ ಮತ್ತು ನೈತಿಕತೆ ಎರಡನ್ನೂ ನಿಭಾಯಿಸಿಕೊಂಡು ಹೋಗುವ ಜವಾಬ್ದಾರಿ ಅವರ ಮೇಲಿದೆ. ಆದ್ದರಿಂದ ಶಿಕ್ಷಕರು ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ತಮ್ಮನ್ನು ಅಣಿಗೊಳಿಸಿಕೊಂಡು ವಿದ್ಯಾರ್ಥಿಗಳನ್ನೂ ಅದೇರೀತಿ ರೂಪಿಸಬೇಕು ಎಂದರು.
ವ್ಯವಸ್ಥಾಪಕ ದೀಪಕ ಜೋಡಂಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಯೋಜಕ ಬಸವರಾಜ ಕುಪ್ಪಸಗೌಡ್ರ ನಿರೂಪಿಸಿದರು. ವಿವಿಧ ಜಿಲ್ಲೆಗಳ ನೂರಾರು ಅಭ್ಯರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.