ಜಿಲ್ಲೆ

ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಷಡ್ಯಂತ್ರಕ್ಕೆ ಅಹಿಂದ ಒಕ್ಕೂಟ ಅಸಮಾಧಾನ

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಧಾರ ರಹಿತ ಆಪಾದನೆ ಮಾಡಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಷಡ್ಯಂತ್ರ ನಡೆಸುತ್ತಿರುವ ಶಕ್ತಿಗಳ ವಿರುದ್ಧ ಕೊಡಗು ಜಿಲ್ಲಾ ಅಹಿಂದ ಒಕ್ಕೂಟದ ವತಿಯಿಂದ ಆ.೮ ರಂದು ಕುಶಾಲನಗರದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ಅಹಿಂದ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕುರುಬ ಸಮಾಜದ ರಾಜ್ಯ ನಿರ್ದೇಶಕ ಕೆ.ಬಿ.ಶಾಂತಪ್ಪ ತಿಳಿಸಿದರು.


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಪ್ರತಿಭಟನೆ ನಡೆಸುವ ಮೂಲಕ ತೇಜೋವಧೆ ಮಾಡಲು ಹೊರಟಿರುವ ಪ್ರತಿಪಕ್ಷಗಳ ಕುತಂತ್ರವನ್ನು ಜನರಿಗೆ ಮನವರಿಕೆ ಮಾಡಲಾಗುವುದು. ಸತ್ಯವನ್ನು ಜನರ ಮುಂದಿಡುವ ಉದ್ದೇಶದಿಂದ ಅಹಿಂದ ಒಕ್ಕೂಟ, ಕುರುಬ ಸಮಾಜ ಹಾಗೂ ಪ್ರಗತಿಪರ ಸಂಘಟನೆಗಳಿಂದ ಕುಶಾಲನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಆದ್ದರಿಂದ ರಾಜಕೀಯ ರಹಿತವಾಗಿ ಎಲ್ಲರೂ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.


ಮೂಡ ಹಗರಣದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ವಿನಾಕಾರಣ ಆರೋಪ ಹೊರಿಸಿ ಸುಳ್ಳನ್ನು ಸತ್ಯ ಎಂಬಂತೆ ಪ್ರತಿಬಿಂಬಿಸಲಾಗುತ್ತಿದೆ. ಸಾಮಾಜಿಕ ನ್ಯಾಯದ ತತ್ವವನ್ನು ಆಡಳಿತದಲ್ಲಿ ಅಳವಡಿಸಿಕೊಂಡು ಮುನ್ನಡೆದು ಎಲ್ಲಾ ವರ್ಗಗಳ ಪ್ರಗತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರಮಿಸುತ್ತಿದ್ದಾರೆ. ಇದನ್ನು ಸಹಿಸಿದ ಪ್ರತಿಪಕ್ಷಗಳು ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಶೋಷಿತ ಸಮುದಾಯದ ಧ್ವನಿಯನ್ನು ಅಡಗಿಸುವ ಕೆಲಸವನ್ನು ಯಾರೂ ಮಾಡದೇ, ಸಮಾಜದ ರಕ್ಷಣೆ ಮಾಡಬೇಕು ಎಂದರು.


ಅಹಿಂದ ಒಕ್ಕೂಟದ ಜಿಲ್ಲಾ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ದಲಿತರಿಗೆ ಸಾಮಾಜಿಕ ನ್ಯಾಯ ಒದಗಿಸಿ ಹತ್ತು ಹಲವು ಕಾರ್ಯಕ್ರಮಗಳನ್ನು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೋಷಿತ ಸಮುದಾಯದ ಶಕ್ತಿಯಾಗಿ, ಧ್ವನಿ ಇಲ್ಲದವರಿಗೆ ಗಟ್ಟಿ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ಮೂಡ ಹಗರಣದ ಆರೋಪದ ಕುರಿತು ತನಿಖೆ ನಡೆಯುತ್ತಿರುವಾಗಲೇ ಜನರ ಹಾದಿ ತಪ್ಪಿಸುವುದಕ್ಕಾಗಿ ವಿರೋಧ ಪಕ್ಷಗಳು ಮುಖ್ಯಮಂತ್ರಿಗಳನ್ನು ಗುರಿ ಮಾಡಿ ಹೋರಾಟ ನಡೆಸುತ್ತಿವೆ. ಇದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಕುಶಾಲನಗರದ ಪ್ರತಿಭಟನೆ ಸಂದರ್ಭ ದೇಶದ ಎಲ್ಲಾ ಜನತೆಗೆ ಸಾಮಾಜಿಕ ನ್ಯಾಯ ದೊರಕಬೇಕು. ಸಂವಿಧಾನ ದತ್ತವಾಗಿರುವ ಉದ್ಯೋಗದ ಹಕ್ಕನ್ನು ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತ್ಗು ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.


ಸುದ್ದಿಗೋಷ್ಠಿಯಲ್ಲಿ ಕುರುಬ ಸಮಾಜದ ರಾಜ್ಯ ನಿರ್ದೇಶಕ ಹೇಮಲತಾ ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗಾಧರ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಹಾಗೂ ನಗರಸಭಾ ಮಾಜಿ ಸದಸ್ಯ ಕೆ.ಜಿ.ಪೀಟರ್ ಉಪಸ್ಥಿತರಿದ್ದರು.

ಆ.೨೦ರಂದು ಅರಸು ಜನ್ಮದಿನಾಚರಣೆ
ಸಾಮಾಜಿಕ ನ್ಯಾಯದ ಹರಿಕಾರ ದಿ.ದೇವರಾಜು ಅರಸು ಅವರ ಜನ್ಮದಿನಾಚರಣೆಯ ಹಿನ್ನೆಲೆ ಆ.೨೦ರಂದು ಮಡಿಕೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಟಿ.ಪಿ.ರಮೇಶ್ ಮನವಿ ಮಾಡಿದರು.