ಮೈಸೂರು: ಮೇಕೆದಾಟು ಯೋಜನೆ ಜಾರಿಗೊಳಿಸುವ ಮೂಲಕ ಕಾವೇರಿ ನೀರಿನ ಸಮಸ್ಯೆ ಬಗೆಹರಿಸಲು ಶೀಘ್ರ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಕಾವೇರಿ ಕ್ರಿಯಾ ಸಮಿತಿಯಿಂದ ಜೂ.15ರಂದು ಮೇಕೆದಾಟು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಜಯಪ್ರಕಾಶ್ ಹೇಳಿದರು.
ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಬೆಳಗ್ಗೆ 9ಕ್ಕೆ ವಾಹನಗಳಲ್ಲಿ ಸುಮಾರು ನೂರು ಜನ ಮೇಕೆದಾಟಿಗೆ ತೆರಳಿ ಯೋಜನೆ ಶೀಘ್ರ ಜಾರಿಗೊಳಿಸಬೇಕು ಎಂದು ಪ್ರತಿಭಟನೆ ನಡೆಸಿ ಬಳಿಕ ರಾಜ್ಯ, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯ್ಲಲಿ ತಿಳಿಸಿದರು.
ಕಾವೇರಿ ನದಿ ನೀರಿನ ವಿಚಾರದಲ್ಲಿ ತಮಿಳುನಾಡಿನ ರಾಜಕಾರಣಿಗಳಿಗಿರುವ ಇಚ್ಛಾಶಕ್ತಿಯನ್ನು ಕರ್ನಾಟಕದ ರಾಜಕಾರಣಿಗಳಿಗೆ ಮನವರಿಕೆ ಮಾಡಿಕೊಡಲು ಕಾವೇರಿ ಕ್ರಿಯಾ ಸಮಿತಿಯಿಂದ ಮೇಕೆದಾಟಿನಲ್ಲಿ ಧರಣಿ ನಡೆಸಲಾಗುತ್ತಿದೆ ಎಂದರು.
ರಾಜ್ಯ ಸರ್ಕಾರ ಮೇಕೆದಾಟು ಯೋಜನೆಗೆ ಬೇಕಾದ ಅನುಮತಿ ಪಡೆಯಲು ಮತ್ತು ಯೋಜನೆ ಪ್ರಾರಂಭಿಸಲು ಕಾರ್ಯಪ್ರವೃತ್ತರಾಗಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಕಾವೇರಿ ನೀರಿನ ಸಮಸ್ಯೆ ಶಾಶ್ವತವಾಗಿ ಪರಿಹರಿಸಬೇಕೆಂದು ಒತ್ತಾಯಿಸಲಾಗುತ್ತದೆ ಎಂದು ತಿಳಿಸಿದರು.
ಸಮಿತಿ ಉಪಾಧ್ಯಕ್ಷ ಎಂ.ಜೆ.ಸುರೇಶ್‌ಗೌಡ ಮಾತನಾಡಿ, ಕಾವೇರಿ ವಿಚಾರವಾಗಿ ಶಾಶ್ವತ ಪರಿಹಾರ ಹಾಗೂ ಮೇಕೆದಾಟು ಯೋಜನೆ ಆರಂಭಿಸಲು ಹೋರಾಡುವೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದರು. ಅಲ್ಲದೆ ವಿ.ಸೋಮಣ್ಣ ಅವರು ನೂತನ ಜಲಸಂಪನ್ಮೂಲ ಸಚಿವರೂ ಅಗಿದ್ದಾರೆ. ಹಾಗಾಗಿ ಸಚಿವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕನ್ನಡಿಗರ ಜೀವನದಿ ಉಳಿಸಲು ಸಹಕರಿಸಬೇಕು ಎಂದು ಕೋರಿದರು.
ಸಮಿತಿಯ ತೇಜಸ್ ಲೋಕೇಶ್‌ಗೌಡ ಮಾತನಾಡಿ, ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಿರುವುದರಿಂದ ರಾಜ್ಯಕ್ಕೆ ಅನ್ಯಾಯವಾದಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಎಲ್ಲ ಸಂಸದರಿಗೂ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು. ಸ್ಪಂದಿಸದಿದ್ದರೆ ಅವರ ವಿರುದ್ಧವೂ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ರಾಜ್ಯದಿಂದ ಈಗ ಐವರು ಕೇಂದ್ರ ಸರ್ಕಾರದ ಮಂತ್ರಿಗಳಾಗಿರುವುದರಿಂದ ತಮಿಳುನಾಡಿನ ಒತ್ತಡಕ್ಕೆ ಮಣಿಯದೆ ರಾಜ್ಯದ ನೆಲ, ಜಲ, ಭಾಷೆ ಪರವಾಗಿ ಬದ್ಧತೆಯಿಂದ ನಿಲ್ಲಬೇಕು. ನಮಗೆ ಕಾವೇರಿ ವಿಚಾರದಲ್ಲಿ ಮೇಕೆದಾಟು ವಿಚಾರದಲ್ಲಿ ನ್ಯಾಯ ಒದಗಿಸಬೇಕು ಎಂದರು.
ಸಮಿತಿ ಪ್ರಧಾನ ಸಂಚಾಲಕ ಮೂಗೂರು ನಂಜುಂಡಸ್ವಾಮಿ, ಸದಸ್ಯರಾದ ಕೃಷ್ಣಪ್ಪ, ನಾಗರಾಜು, ಭಾಗ್ಯಮ್ಮ ಇದ್ದರು.