ಜಿಲ್ಲೆ

ಸಡಗರದ ಶ್ರೀ ವೀರಭದ್ರೇಶ್ವರ ರಥೋತ್ಸವ

ಮುಂಡರಗಿ: ತಾಲೂಕಿನ ಸುಕ್ಷೇತ್ರ ಶಿಂಗಟಾಲೂರು ಶ್ರೀ ವೀರಭದ್ರೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ ನಿಮಿತ್ತ ಗುರುವಾರ ಸಹಸ್ರಾರು ಭಕ್ತರ ಜಯಘೋಷಗಳ ಮಧ್ಯೆ ಸಕಲ ವಾದ್ಯ ಮೇಳಗಳೊಂದಿಗೆ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಭಕ್ತರು ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದು ಶ್ರೀ ವೀರಭದ್ರೇಶ್ವರ ದೇವರ ಕೃಪೆಗೆ ಪಾತ್ರರಾದರು. ದೇವಸ್ಥಾನ ಕಮಿಟಿಯಿಂದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಶ್ರೀ ಮುದುಕೇಶ್ವರ ಶಿವಾಚಾರ್ಯ ಸ್ವಾಮೀಜಿ, ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ, ಶ್ರೀ ಅಭಿನವ ಸಿದ್ಧವೀರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ, ಪದಾಧಿಕಾರಿಗಳು ಪಾಲ್ಗೊಂಡಿದ್ದರು.