ವಿಜಯವಾಣಿ ಸುದ್ದಿಜಾಲ ಹೆಬ್ರಿ
ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕ, ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಎಸ್ಸೆಸ್ಸೆಲ್ಸಿ, ಪದವಿ ಪೂರ್ವ ವಾರ್ಷಿಕ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಕಾರ್ಯಕ್ರಮ ಶನಿವಾರ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು.
ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ನಾಗರಾಜ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಕನ್ನಡ ಕುರಿತ ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು. ಕಲಿಕೆಗೆ ಮಾಧ್ಯಮ ಮುಖ್ಯವಲ್ಲ ಕಲಿಯುವ ಮನಸ್ಸು ಮುಖ್ಯ. ಮಾತೃಭಾಷೆಯಲ್ಲಿ ಉತ್ತಮ ಪ್ರತಿಭೆ ತೋರ್ಪಡಿಸಲು ಸಾಧ್ಯ. ಅಂತಹ ಎಲ್ಲ ಪ್ರತಿಭೆಗಳು ಇಂತಹ ಕಾರ್ಯಕ್ರಮಗಳ ಮೂಲಕ ಅನಾವರಣಗೊಳ್ಳಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಯನ್ನಾಡಿ ಕನ್ನಡದ ಪದಬಳಕೆ ವ್ಯಾವಹಾರಿಕವಾಗಿ ಹೆಚ್ಚಾಗಬೇಕು. ಎಷ್ಟು ಭಾಷೆಗಳನ್ನಾದರೂ ಕಲಿಯಬಹುದು. ಆದರೆ ನಮ್ಮ ಮಾತೃ ಭಾಷೆಯ ಮೇಲಿನ ಪ್ರೀತಿ ಮತ್ತು ಬಳಕೆ ಕಡಿಮೆಯಾಗಬಾರದು ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ಘಟಕದ ಅಧ್ಯಕ್ಷ ಶ್ರೀನಿವಾಸ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.
ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಪ್ನಾ ಎನ್.ಶೆಟ್ಟಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಉಡುಪಿ ಜಿಲ್ಲಾ ಕ.ಸಾ.ಪ ಸಂಘಟನಾ ಕಾರ್ಯದರ್ಶಿ ಪಿ.ವಿ.ಆನಂದ ಸಾಲಿಗ್ರಾಮ, ಕಸಾಪ ಪದಾಧಿಕಾರಿ ನರಸಿಂಹ ಮೂರ್ತಿ ಉಪಸ್ಥಿತರಿದ್ದರು. ಗೌರವ ಕಾರ್ಯದರ್ಶಿ ಮಂಜುನಾಥ ಕೆ.ಶಿವಪುರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಯ ಕನ್ನಡ ಉಪನ್ಯಾಸಕ ದೀಪಕ್ ಎನ್. ಸ್ವಾಗತಿಸಿದರು. ಕ.ಸಾ.ಪ ಸಂಘಟನಾ ಕಾರ್ಯದರ್ಶಿ ಪ್ರೀತೇಶ್ ಶೆಟ್ಟಿ ವಂದಿಸಿದರು. ಗೌರವ ಕಾರ್ಯದರ್ಶಿ ಡಾ.ಪ್ರವೀಣಕುಮಾರ್ ನಿರೂಪಿಸಿದರು. ಪದಾಧಿಕಾರಿ ಪುಷ್ಪಾವತಿ ಶೆಟ್ಟಿ ಪ್ರಾರ್ಥಿಸಿದರು.