ಮಡಿಕೇರಿ:
ಜೂನ್ ಮತ್ತು ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ರಸ್ತೆಗಳು ಹಾಳಾಗಿದ್ದು, ತ್ವರಿತಗತಿಯಲ್ಲಿ ಗುಂಡಿ ಮುಚ್ಚುವಂತೆ ಲೋಕೋಪಯೋಗಿ, ಪಂಚಾಯತ್ ರಾಜ್, ನೀರಾವರಿ ಹಾಗೂ ಪೌರಾಡಳಿತ ಇಲಾಖೆಯ ಎಂಜಿನಿಯರ್‌ಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಸುರಿದ ಹೆಚ್ಚಿನ ಮಳೆಗೆ ರಸ್ತೆಗಳು ಗುಂಡಿಮಯವಾಗಿದ್ದು, ಸಾರ್ವಜನಿಕರಿಂದ ದೂರುಗಳು ಬರುತ್ತಿದೆ. ಕೂಡಲೇ ರಸ್ತೆ ಗುಂಡಿ ಮುಚ್ಚವಂತೆ ಎಂಜಿನಿಯರ್‌ಗಳಿಗೆ ತಾಕೀತು ಮಾಡಿದರು.
ಈ ಬಗ್ಗೆ ವಿಷಯ ಪ್ರಸ್ತಾಪಿಸಿದ ಶಾಸಕ ಡಾ.ಮಂತರ್ ಗೌಡ ಶನಿವಾರಸಂತೆ-ಕೊಡ್ಲಿಪೇಟೆ, ಕೂಡಿಗೆ-ಸೋಮವಾರಪೇಟೆ ಮಾರ್ಗದ ರಸ್ತೆಗಳು ಸೇರಿದಂತೆ ಹಲವು ರಸ್ತೆಗಳು ಗುಂಡಿ ಬಿದ್ದಿದ್ದು, ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ಕೂಡಲೇ ಗುಂಡಿ ಮುಚ್ಚಬೇಕು ಎಂದು ನಿರ್ದೇಶನ ನೀಡಿದರು.
ಈ ಕುರಿತು ಮಾತನಾಡಿದ ಶಾಸಕ ಎ.ಎಸ್. ಪೊನ್ನಣ್ಣ ಹೆಚ್ಚಿನ ಮಳೆಯಿಂದಾಗಿ ರಸ್ತೆಗಳು ಗುಂಡಿಯಾಗಿದ್ದು, ಇದನ್ನು ಸರಿಪಡಿಸುವ ಕೆಲಸ ಆಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶ್ರೀಮಂಗಲ ಬಳಿ ರಸ್ತೆ ಕಾಮಗಾರಿಯ ಬಗ್ಗೆ ಶಾಸಕರು ಮಾಹಿತಿ ಪಡೆದರು. ಜಿಲ್ಲೆಯ ಎರಡು ಕ್ಷೇತ್ರದಲ್ಲಿ ಯಾವ ಯಾವ ರಸ್ತೆಗಳು ಹಾಳಾಗಿವೆ ಎಂಬ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿ, ಮಳೆಹಾನಿ ಕಾಮಗಾರಿಯನ್ನು ಕೈಗೊಳ್ಳಬಹುದಾಗಿದೆ. ಆದರೂ ಏಕೆ ಗುಂಡಿ ಮುಚ್ಚಲು ಮುಂದಾಗಿಲ್ಲ ಎಂದು ಪೊನ್ನಣ್ಣ ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೆಚ್ಚಿನ ಮಳೆಯಿಂದಾಗಿ ರಸ್ತೆ, ಸೇತುವೆ ಮತ್ತಿತರ ಹಾನಿಯ ಕಾಮಗಾರಿಗಳ ಸಂಬAಧ ವರದಿ ನೀಡಿ, ಕಾಮಗಾರಿ ಕೈಗೊಳ್ಳಬಹುದಾಗಿದೆ. ಆ ನಿಟ್ಟಿನಲ್ಲಿ ಎಂಜಿನಿಯರ್‌ಗಳು ತಕ್ಷಣ ಕ್ರಮವಹಿಸಬೇಕು ಎಂದರು.
ಈ ಕುರಿತು ಮಾತನಾಡಿದ ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ ಇಲಾಖೆಯ ವ್ಯಾಪ್ತಿಯಲ್ಲಿ ಸುಮಾರು 75 ಕಾಮಗಾರಿ ಕೈಗೊಳ್ಳಬೇಕಿದ್ದು, ತಾತ್ಕಾಲಿಕ ದುರಸ್ತಿ ಕಾರ್ಯಕ್ಕೆ ಸುಮಾರು 346 ಲಕ್ಷ ರೂ. ಅನುದಾನ ಬೇಕಿದೆ, ಸದ್ಯ ರಸ್ತೆಯ ಗುಂಡಿ ಮುಚ್ಚುವ ಕಾರ್ಯ ಕೈಗೊಳ್ಳಲಾಗುವುದು. ಅತಿವೃಷ್ಟಿಯಿಂದಾಗಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ, ಸೇತುವೆ ಹಾಗೂ ಕಟ್ಟಡಗಳು ಸೇರಿದಂತೆ ಸುಮಾರು 76 ಕೋಟಿ ರೂ.ಗೂ ಹೆಚ್ಚಿನ ನಷ್ಟವಾಗಿದೆ ಎಂದು ಮಾಹಿತಿ ನೀಡಿದರು.
ಪಂಚಾಯತ್ ರಾಜ್ ವಿಭಾಗದ ಎಇಇ ನಾರಾಯಣ ಮೂರ್ತಿ ಮಾತನಾಡಿ ಪಂಚಾಯತ್ ರಾಜ್ ಎಂಜಿನಿಯರಿAಗ್ ವಿಭಾಗ ವ್ಯಾಪ್ತಿಯಲ್ಲಿ ಸುಮಾರು 40 ಕೋಟಿ ರೂ. ನಷ್ಟು ಹಾನಿಯಾಗಿದ್ದು, ಗ್ರಾಮೀಣ ರಸ್ತೆಯಲ್ಲಿ ಗುಂಡಿ ಮುಚ್ಚಲಾಗುವುದು ಎಂದರು.
ಸೆಸ್ಕ್ ವಿಭಾಗ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಿಂದಾಗಿ ವಿದ್ಯುತ್ ಕಂಬಗಳು, ಪರಿವರ್ತಕಗಳು ಸೇರಿದಂತೆ ಸುಮಾರು 4 ಕೋಟಿ ರೂ.ಗೂ ಹೆಚ್ಚು ಹಾನಿಯಾಗಿದೆ ಎಂದು ಸೆಸ್ಕ್ ಇಇ ಅನಿತಾ ಬಾಯಿ ವಿವರಿಸಿದರು.
ಈ ಸಂದರ್ಭ ಮಾತನಾಡಿದ ಸಚಿವ ಬೋಸರಾಜು ಮಳೆಹಾನಿ ಸಂಬAಧ ಮುಖ್ಯಮಂತ್ರಿ ಜಿಲ್ಲೆಗೆ ಭೇಟಿ ನೀಡಿ, ರಸ್ತೆ ಸೇರಿದಂತೆ ಹಲವು ಕಾಮಗಾರಿ ಕೈಗೊಳ್ಳಲು ಸೂಚಿಸಿದ್ದಾರೆ. ನಾನು ಹಲವು ಬಾರಿ ಭೇಟಿ ನೀಡಿದ್ದೇನೆ, ಕಂದಾಯ ಸಚಿವರು ಜಿಲ್ಲೆಗೆ ಆಗಮಿಸಿ ಹಲವು ನಿರ್ದೇಶನ ನೀಡಿದ್ದಾರೆ. ಆದರೂ ಸಹ ರಸ್ತೆ ಗುಂಡಿ ಮುಚ್ಚುವ ಕೆಲಸ ಆಗಿಲ್ಲ ಎಂದರೆ ಹೇಗೆ ಎಂದು ಸಚಿವರು ಪ್ರಶ್ನಿಸಿದರು.
ಹಾರಂಗಿ ಜಲಾಶಯ ಬಗ್ಗೆ ಮಾಹಿತಿ ಪಡೆದ ಸಚಿವರು ಮಳೆ ಹೆಚ್ಚಾದಲ್ಲಿ ಜಲಾಶಯದಿಂದ ನೀರು ಹೊರ ಬಿಡುವ ಬಗ್ಗೆ ಅಚ್ಚುಕಟ್ಟು ಪ್ರದೇಶದ ಜನರಿಗೆ ಮೊದಲೇ ಮಾಹಿತಿ ನೀಡಬೇಕು ಎಂದು ಸಲಹೆ ಮಾಡಿದರು. ಮನೆ ಹಾನಿಗೆ ಪರಿಹಾರ ವಿತರಣೆ, ಡೆಂಗ್ಯೂ ನಿಯಂತ್ರಣ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಬಗ್ಗೆ ಸಚಿವರು ಮಾಹಿತಿ ಪಡೆದರು.
ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ,
ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹಾರಂಗಿ ವಿಭಾಗದ ಅಧೀಕ್ಷಕ ಎಂಜಿನಿಯರ್ ರಘುಪತಿ, ಇಇ ಪುಟ್ಟಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ವಿಶಾಲ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುAಡಯ್ಯ, ಡಾ.ಶ್ರೀನಿವಾಸ, ತಹಸೀಲ್ದಾರ್ ಪ್ರವೀಣ್ ಕುಮಾರ್ ಇದ್ದರು.