ಜಿಲ್ಲೆ

ಅಂಧ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದವನಿಗೆ ಕಠಿಣ ಸಜೆ

ಮೈಸೂರು: ಅಂಧ ಮಹಿಳೆ ಮೇಲೆ ಹಾಡಹಗಲೇ ಅತ್ಯಾಚಾರವೆಸಗಿದ್ದ ಅಪರಾಧಿಗೆ ನ್ಯಾಯಾಲಯ 10 ವರ್ಷ ಕಠಿಣ ಸಜೆ ಹಾಗೂ 20 ಸಾವಿರ ರೂ. ದಂಡ ವಿಧಿಸಿದೆ.
ಹುಣಸೂರು ತಾಲೂಕು ಬಿಳಿಕೆರೆ ಹೋಬಳಿ ಕೊಮ್ಮೆಗೌಡನಕೊಪ್ಪಲಿನ ಚಲುವರಾಜು (50) ಶಿಕ್ಷೆಗೆ ಗುರಿಯಾದ ಅಪರಾಧಿ.
ಗ್ರಾಮದ ಮನೆಯಲ್ಲಿ ಅಂಧ ಮಹಿಳೆ ಒಬ್ಬರೇ ಇದ್ದಾಗ 2019ರ ಆಗಸ್ಟ್ 16ರಂದು ಬೆಳಗ್ಗೆ ಅತಿಕ್ರಮವಾಗಿ ಪ್ರವೇಶ ಮಾಡಿದ ಚಲುವರಾಜು, ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರವೆಸಗಿದ್ದ. ಅಲ್ಲದೆ ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ನಿನ್ನನ್ನು ಮುಗಿಸುತ್ತೇನೆಂದು ಕೊಲೆ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆ ಅತ್ತಿಗೆ ಬಿಳಿಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಅಂದಿನ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಸಿ. ಪೂವಯ್ಯ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಂ.ರಮೇಶ ಅವರು, ಸಾಕ್ಷಿಗಳನ್ನು ಪರಿಗಣಿಸಿ ಚಲುವರಾಜುಗೆ 10 ವರ್ಷಗಳ ಕಠಿಣ ಸಜೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಕೆ.ನಾಗರಾಜ ಸರ್ಕಾರದ ಪರ ವಾದ ಮಂಡಿಸಿದರು.