ಮಡಿಕೇರಿ:
ಮಕ್ಕಳು ಓದಿನ ಜತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಪ್ರತಿಭೆ ಅನಾವರಣಕ್ಕೆ ವೇದಿಕೆ ಕಾರ್ಯಕ್ರಮಗಳು ಸಹಕಾರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಬಸವರಾಜು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಕ್ಕಳು ಓದಿನ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ತಮ್ಮ ಪ್ರತಿಭೆಯನ್ನು ಅನಾವರಣ ಮಾಡಲು ಉತ್ತಮ ಅವಕಾಶ ದೊರೆಯಲಿದೆ. ಇಂತಹ ಅವಕಾಶಗಳನ್ನು ಬಳಸಿಕೊಂಡು ಸಾಹಿತ್ಯ, ಸಂಗೀತ, ಸಾಂಸ್ಕೃತಿಕ, ಸಂಗೀತ, ಹಾಡುಗಾರಿಕೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಮಹಾದೇವ ಸ್ವಾಮಿ ಮಾತನಾಡಿ, ಮಕ್ಕಳು ವಿವಿಧ ಸಾಂಸ್ಕೃತಿಕ ಕಲಾ ಪ್ರಕಾರಗಳಲ್ಲಿ ಪಾಲ್ಗೊಳ್ಳುವುದರಿಂದ ಉತ್ಸಾಹ ಹೆಚ್ಚಾಗುತ್ತದೆ. ಇದರಿಂದ ಪಠ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧೆಡೆಯಿಂದ 100ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. 9-12 ಹಾಗೂ 13-16 ವರ್ಷದ ಮಕ್ಕಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಆಯೋಜಿಸಲಾಗಿತ್ತು. ಮಕ್ಕಳ ಸ್ಪರ್ಧಾ ಕಾರ್ಯಕ್ರಮದಲ್ಲಿ ಚಿತ್ರಕಲಾ ವಿಭಾಗದಲ್ಲಿ ಫರ್ಹಾನ, ತಶ್ಮಿಕ, ಪ್ರಣವತಿ ರಾಮ ಕೃಷ್ಣ, ಮೊಹಮ್ಮದ್ ಸುಹಾನ್ ವಿಜ್ಞಾನ ಸೃಜನಾತ್ಮಕ ಆವಿಷ್ಕಾರದಲ್ಲಿ ಶಿವಕುಮಾರ್ ಎಚ್.ಆರ್ ಹಾಗೂ ಜೆ.ಕೆ.ಭೂಮಿಕಾ, ಸೃಜನಾತ್ಮಕ ಪ್ರದರ್ಶನ ಕಲೆಗಳಲ್ಲಿ ಸಿ.ಎಚ್.ದಿಶಿಕಾ, ಬಿ.ಎಂ.ಯಶಿಕಾ, ಬಿ.ಎಸ್.ಅನಘ, ಕೆ.ಧನ್ಯರನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಯಿತು. ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಬಹುಮಾನವನ್ನು ಹಾಗೂ ಪ್ರಮಾಣ ಪತ್ರವನ್ನು ವಿತರಿಸಿದರು.
ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಸದಾಶಿವ ಪಲ್ಲೇದ್, ಮಡಿಕೇರಿ ತಾಲೂಕು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತಾ ಹಾಗೂ ತೀರ್ಪುಗಾರರು ಮತ್ತು ಪಾಲಕರು ಭಾಗವಹಿಸಿದ್ದರು.