ಗುಂಡ್ಲುಪೇಟೆ: ಪಟ್ಟಣದ ಸೇಂಟ್ ಜಾನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಶನಿವಾರ ನಡೆಯಿತು.
ಮೈಸೂರು ಎಂಡಿಇಎಸ್ ಕಾರ್ಯದರ್ಶಿ ರೆವೆರೆಂಟ ಫಾದರ್ ಎಡ್ವರ್ಡ್ ವಿಲಿಯಂ ಸಲ್ಡಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಾಲಕರು ಮತ್ತು ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ಆದ್ದರಿಂದ ಉತ್ತಮ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ಕೊಡುಗೆಯಾಗಿ ನೀಡುವ ಗುರುತರ ಜವಾಬ್ದಾರಿ ನಿರ್ವಹಿಸಬೇಕು ಎಂದು ಹೇಳಿದರು.
ಮಕ್ಕಳಿಗಾಗಿ ಶಾಲೆಯಲ್ಲಿ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಅದರಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ರೆವೆರೆಂಟ್ ಫಾದರ್ ನವೀನ್ ಬಾಲ ಕುಮಾರ್, ಶಾಲಾ ವ್ಯವಸ್ಥಾಪಕ ಫಾದರ್ ದೊರೆಸ್ವಾಮಿ, ಮುಖ್ಯ ಶಿಕ್ಷಕಿ ಸುನಿತಾ ಮೇರಿ, ನರ್ಸರಿ ಶಾಲೆಯ ಮುಖ್ಯ ಶಿಕ್ಷಕಿ ಲಿಜೊ ಮೊರೀಸ್, ಸಹಶಿಕ್ಷಕ ರಘು ಇತರರು ಇದ್ದರು.