ಮೈಸೂರು: ಬಿಜೆಪಿಯೊಂದಿಗೆ ಜೆಡಿಎಸ್ ಮಾಡಿಕೊಂಡಿರುವ ಹೊಂದಾಣಿಕೆ ಲೋಕಸಭಾ ಚುನಾವಣೆಗೆ ಮಾತ್ರ ಸೀಮಿತ. ನಮ್ಮ ತತ್ವ, ಸಿದ್ಧಾಂತವೇ ಬೇರೆ, ಬಿಜೆಪಿಯ ತತ್ವ, ಸಿದ್ಧಾಂತವೇ ಬೇರೆ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದರು.
ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನತಾ ಪಕ್ಷವನ್ನು ಕಟ್ಟಿದ ಜಯಪ್ರಕಾಶ್ ನಾರಾಯಣ್, ಪಕ್ಷ ಉಳಿಸಿ ಬೆಳೆಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹಾದಿಯಲ್ಲಿ ನಾವು ಸಾಗುತ್ತೇವೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಮಾತ್ರಕ್ಕೆ ನಮ್ಮ ತತ್ವ, ಸಿದ್ಧಾಂತದಲ್ಲಿ ಒಂದಿಂಚು ಕೂಡ ಬದಲಾಗುವುದಿಲ್ಲ. ಬಿಜೆಪಿಯವರದು ಅವರಿಗೆ, ನಮ್ಮದು ನಮಗೆ. ಕೇವಲ ಚುನಾವಣಾ ದೃಷ್ಟಿಯಿಂದ ಮಾತ್ರ ನಾವು ಒಂದಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಕಿದ್ದ ಕೇಸರಿ ಶಾಲು ಬಿಜೆಪಿಯವರ ಕೇಸರಿ ಶಾಲು ಅಲ್ಲ, ಅದು ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಕುಮಾರಸ್ವಾಮಿ ಭೇಟಿ ನೀಡಿದ ಸಂದರ್ಭ ಭಕ್ತರೊಬ್ಬರು ಹಾಕಿದ ಕೇಸರಿ ಶಾಲಾಗಿದೆ. ಆದರೆ, ಕಾಂಗ್ರೆಸ್‌ನವರು ಅದನ್ನೇ ದೊಡ್ಡದು ಮಾಡಿದ್ದಾರೆ ಅಷ್ಟೆ ಎಂದರು.
ನಮ್ಮ ರಾಜ್ಯದಿಂದಲೇ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಎಲ್ಲವನ್ನೂ ಕೊಟ್ಟಿದ್ದೇವೆ ಅನ್ನುತ್ತಿದ್ದಾರೆ. ಕಾಂಗ್ರೆಸ್‌ನವರು ಏನು ಕೊಟ್ಟಿಲ್ಲ ಅನ್ನುತ್ತಿದ್ದಾರೆ. ಏನೇ ಇದ್ದರು ಕೂತು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದಿತ್ತು. ಆದರೆ, ಕೇಂದ್ರ ಸರ್ಕಾರ ಕೊಟ್ಟಿಲ್ಲ ಅಂತ ಹೇಳಿ ಪ್ರತಿಭಟನೆ ಮಾಡಲು ಮುಂದಾಗಿರುವುದು ಸರಿಯಲ್ಲ. ದೆಹಲಿಗೆ ಹೋಗಿ ಪ್ರತಿಭಟನೆ ಮಾಡುವ ಅಗತ್ಯ ಇರಲಿಲ್ಲ ಎಂದು ಹೇಳಿದರು.