ಜಿಲ್ಲೆ

ಗ್ಯಾರಂಟಿ ಯೋಜನೆ ಕೊಟ್ಟು ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಸರ್ಕಾರ : ಮಾಜಿ ಸಚಿವ ಸಾ.ರಾ. ಮಹೇಶ್ ಟೀಕೆ

ಮೈಸೂರು: ನಾಗಮಂಗಲದಲ್ಲಿ ಗಣೇಶ ಮೂರ್ತಿಯನ್ನು ಪೋಲಿಸ್ ವಾಹನದಲ್ಲಿ ಕೂರಿಸಿದ್ದು ಸರಿಯಲ್ಲ, ಇದರಲ್ಲಿ ಗೃಹ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಮಾಜಿ ಸಚಿವ ಸಾ.ರಾ. ಮಹೇಶ್ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಪೊಲೀಸ್ ಇಲಾಖೆ ಸರ್ಕಾರದ ಕಪಿಮುಷ್ಟಿಯಲ್ಲಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಪಿಮುಷ್ಟಿಯಲ್ಲಿದೆ. ರಾಜ್ಯಪಾಲರು ಕೂಡಲೇ ಈ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ ಜಾಗದಲ್ಲಿ ಮನೆ ಕಟ್ಟಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಕುಮಾರಸ್ವಾಮಿ ಯಾವುದೇ ದಾಖಲೆ ಇಲ್ಲದೇ ಈ ರೀತಿ ಹೇಳಿಕೆ ನೀಡುವುದಿಲ್ಲ. ಅವರು ರಾಜ್ಯಕ್ಕೆ ಬಂದ ನಂತರ ಈ ಬಗ್ಗೆ ಪ್ರತಿಕ್ರಿಯಿಸುತ್ತಾರೆ ಎಂದರು.

ಕಾಂಗ್ರೆಸ್ ಸ್ನೇಹಿತರು ಯಾವಾಗಲೂ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಳ್ಳುತ್ತಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಬೆಳಕಿಗೆ ಬಂದ ಸಂದರ್ಭ ಹಗರಣವೇ ನಡೆದಿಲ್ಲ ಎಂದು ಕಾಂಗ್ರೆಸ್‌ನವರು ಸಮರ್ಥಿಸಿಕೊಂಡಿದ್ದರು. ಆದರೆ, ನಿಗಮದಲ್ಲಿ ದೊಡ್ಡ ಮಟ್ಟದಲ್ಲಿ ಹಗರಣ ನಡೆದಿದ್ದು, ಹಣಕಾಸು ಸಚಿವರಾಗಿರುವ ಸಿದ್ದರಾಮಯ್ಯ ಅವರೇ ಇದಕ್ಕೆ ನೇರ ಹೊಣೆ ಎಂದು ಆರೋಪಿಸಿದರು.

ಕಾಂಗ್ರೆಸ್‌ನವರು ಐದು ಗ್ಯಾರಂಟಿ ಗುಂಗಿನಲ್ಲಿದ್ದಾರೆ. ಗ್ಯಾರಂಟಿ ಕೊಟ್ಟು ಏನೇ ಭ್ರಷ್ಟಾಚಾರ ಮಾಡಿದರೂ ಜನರು ಕೇಳುವುದಿಲ್ಲ ಎನ್ನುವ ಮನಸ್ಥಿತಿಯಲ್ಲಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಜನ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸಿದ್ದಾರೆ. ಮುಂದೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲೂ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.