ರಾಯಚೂರಿನ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದಿಂದ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸಿದರು. ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ರುಸ್ಮಾ ಗೌರವಾಧ್ಯಕ್ಷ ಜಯಣ್ಣ, ಅಧ್ಯಕ್ಷ ರಾಜಾ ಶ್ರೀನಿವಾಸ, ಪದಾಕಾರಿಗಳಾದ ರಾಮಾಂಜಿನೇಯಲು, ಮುರಳೀಧರ ಕುಲಕರ್ಣಿ, ನಾಗಿರೆಡ್ಡಿ, ಸತೀಶ ಇದ್ದರು. 
ಜಿಲ್ಲೆ

ಖಾಸಗಿ ಶಿಕ್ಷಣ ಸಂಸ್ಥೆಗಳ ಕಾರ್ಯ ಶ್ಲಾಘನೀಯ

ರಾಚಯ್ಯ ಸ್ವಾಮಿ

ರಾಯಚೂರು: ಜಿಲ್ಲೆಯ ಶೈಕ್ಷಣಿಕ ಬೆಳವಣಿಗೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದ್ದು, ಅನೇಕ ಸವಾಲುಗಳ ಮಧ್ಯೆಯೂ ಸಂಸ್ಥೆಗಳು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಕಾಳಜಿ ವಹಿಸುತ್ತಿವೆ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ಸ್ಥಳೀಯ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದಿಂದ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಶಾಲೆಗಳಿಗೆ ಹೋಲಿಸಿದಲ್ಲಿ ಉತ್ತಮ ಸೌಲಭ್ಯಗಳನ್ನು ಮಕ್ಕಳಿಗೆ ಒದಗಿಸಲಾಗುತ್ತಿದೆ. ಜತೆಗೆ ಹಲವಾರು ಶಿಕ್ಷಕರಿಗೆ ಉದ್ಯೋಗ ನೀಡುವ ಕೆಲಸವಾಗುತ್ತಿದೆ ಎಂದು ಹೇಳಿದರು.
ಸಾನ್ನಿಧ್ಯ ವಹಿಸಿದ್ದ ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಎಲ್ಲ ದಾನಗಳಿಗಿಂತ ವಿದ್ಯಾ ದಾನ ದೊಡ್ಡದಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದಕ್ಕಿಂತ ದೊಡ್ಡ ಕೆಲಸ ಯಾವುದಿಲ್ಲ. ಶೈಕ್ಷಣಿಕ ಕಾರ್ಯದಲ್ಲಿ ತೊಡಗಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಈ ಸಂದರ್ಭದಲ್ಲಿ ವಿವಿಧ ತಾಲೂಕುಗಳ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜತೆಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ರುಸ್ಮಾ ಗೌರವಾಧ್ಯಕ್ಷ ಜಯಣ್ಣ, ಅಧ್ಯಕ್ಷ ರಾಜಾ ಶ್ರೀನಿವಾಸ, ಪದಾಕಾರಿಗಳಾದ ರಾಮಾಂಜಿನೇಯಲು, ಮುರಳೀಧರ ಕುಲಕರ್ಣಿ, ನಾಗಿರೆಡ್ಡಿ, ಸತೀಶ, ಮುಖಂಡರಾದ ಜಗದೀಶ ಗುಪ್ತಾ, ಬಸವರಾಜ ರೆಡ್ಡಿ, ಶ್ರೀಕಾಂತರಾವ್ ಉಪಸ್ಥಿತರಿದ್ದರು.