ಮೈಸೂರು: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಎಂಎಲ್‌ಸಿ ಸೂರಜ್ ರೇವಣ್ಣ ಬಂಧನದ ವಿಚಾರದಲ್ಲಿ ಯಾವುದೇ ಷಡ್ಯಂತ್ರ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಲೈಂಗಿಕ ದೌರ್ಜನ್ಯದ ಕುರಿತು ಯುವಕನೊಬ್ಬ ದೂರು ಕೊಟ್ಟಿದ್ದಾನೆ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತಪ್ಪು ಯಾರೇ ಮಾಡಿದರೂ ತಪ್ಪೇ. ಪೊಲೀಸರು ನಿಕ್ಷಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ ಎಂದು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡುವುದಕ್ಕೆ ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ದೇಶದಲ್ಲಿ ತೈಲ ಬೆಲೆ ಏರಿಕೆಯಾಗಲು ಬಿಜೆಪಿಯೇ ಕಾರಣ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಇದರ ದರ ಕಡಿಮೆ ಮಾಡಿದರು. ಈಗ ಮತ್ತೆ ಬೆಲೆ ಏರಿಕೆ ಮಾಡಿದೆ ಎಂದು ತಿರುಗೇಟು ಕೊಟ್ಟರು.
ಉಪಚುನಾವಣೆ ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಗ್ರೌಂಡ್ ರಿಯಾಲಿಟಿ ನನಗೆ ಗೊತ್ತಿಲ್ಲ. ನಮ್ಮ ಪಕ್ಷದ ವರಿಷ್ಠರು, ಸ್ಥಳೀಯ ಕಾರ್ಯಕರ್ತರು ಕುಳಿತು ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ ಎಂದು ಪ್ರಶ್ನೆವೊಂದಕ್ಕೆ ಉತ್ತರಿಸಿದರು.