ಗಜೇಂದ್ರಗಡ: ಬೇಸಿಗೆ ಬಿಸಿಲು ಹೆಚ್ಚಿರುವ ಕಾರಣ ಜನ- ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ತುರ್ತು ಕ್ರಮವಹಿಸಬೇಕು ಎಂದು ಬರಗಾಲ ನಿರ್ವಹಣೆಯ ತಾಲೂಕು ನೋಡಲ್ ಅಧಿಕಾರಿ ಹಾಗೂ ತಾ.ಪಂ. ಆಡಳಿತಾಧಿಕಾರಿ ಶಶಿಕಾಂತ ಕೋಟಿಮನೆ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿಯ ಚಿಂತನ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬರ ನಿರ್ವಹಣಾ ಸಿದ್ಧತೆ ಹಿನ್ನ್ನೆಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲು ತಿಳಿಸಿದರು. ತಾಲೂಕಿನ 13 ಗ್ರಾಮ ಪಂಚಾಯಿತಿಯ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ಪಿಡಿಒಗಳೊಂದಿಗೆ ಚರ್ಚೆ ನಡೆಸಿದರು.
ಲಕ್ಕಲಕಟ್ಟಿ, ರಾಂಪೂರು, ಕುಂಟೋಜಿ, ಗುಳಗುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರು ಬರದೇ ಇದ್ದಾಗ ತಕ್ಕ ಮಟ್ಟಿಗೆ ನೀರಿನ ಸಮಸ್ಯೆಯಾಗಲಿದೆ. ಇನ್ನುಳಿದಂತೆ ನೀರಿನ ಸಮಸ್ಯೆ ಇಲ್ಲ ಎಂದು ಪಿಡಿಒ ತಿಳಿಸಿದರು.
ತಾಲೂಕಿನಲ್ಲಿ ಜಾನುವಾರುಗಳಿಗೆ ಸದ್ಯ ಮೇವಿನ ಕೊರತೆ ಇರುವುದಿಲ್ಲ, ಮೇವು ಬ್ಯಾಂಕ್ನಲ್ಲಿ 20 ಟನ್ ಗಳಷ್ಟು ಮೇವು ಲಭ್ಯವಿದೆ ಎಂದು ಉಪ ತಹಸೀಲ್ದಾರ್ ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಖಾಸಗಿ ಬೋರವೆಲ್ಗಳನ್ನು ಗುರುತಿಸಿ ವರದಿ ಸಲ್ಲಿಸುವಂತೆ ನೋಡಲ್ ಅಧಿಕಾರಿಗಳು ಪಿಡಿಒಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಚಿಸಿದರು.
ಉದ್ಯೋಗ ಖಾತ್ರಿ ಕೆಲಸ ನೀಡಿ: ಬರಗಾಲ ಇರುವುದರಿಂದ ಕೂಲಿಕಾರರು ಗೂಳೆ ಹೋಗುವ ಸಾಧ್ಯತೆಗಳಿದ್ದು, ಎಲ್ಲ ಪಂಚಾಯಿತಿಗಳಲ್ಲಿ ನರೇಗಾ ಯೋಜನೆ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಕೆಲಸಕ್ಕಾಗಿ ಅರ್ಜಿ ಸಲ್ಲಿಸುವ ಕೂಲಿಕಾರರಿಗೆ ತಕ್ಷಣವೇ ಕೆಲಸ ನೀಡುವಂತೆ ಹಾಗೂ ಅಧಿಕಾರಿಗಳು ತಮ್ಮ ಮೊಬೈಲ್ ಗಳನ್ನು ಸ್ವಿಚ್ಡ್ ಆಫ್ ಮಾಡದೇ ನಿರಂತರ ಸಂಪರ್ಕಕ್ಕೆ ಲಭ್ಯರಿದ್ದು, ಜನಸಾಮಾನ್ಯರ ಅಹವಾಲುಗಳಿಗೆ ಸಹಾನುಭೂತಿಯಿಂದ ಸ್ಪಂದಿಸಿ ಸಮಸ್ಯೆ ಬಗೆಹರಿಸುವಂತೆ ಹೇಳಿದರು.
ಮತದಾನ ಜಾಗೃತಿ ಮಾಡಿ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಸಿಬ್ಬಂದಿಯನ್ನು ಬಳಕೆ ಮಾಡಿಕೊಂಡು ಪ್ರತಿ ಗ್ರಾಮಗಳಲ್ಲಿ ಮತದಾನ ಜಾಗೃತಿ ಹಮ್ಮಿಕೊಳ್ಳಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.
ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ ಬಡಿಗೇರ, ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಪಿಡಿಒಗಳು, ಗ್ರಾಮ ಆಡಳಿತ ಅಧಿಕಾರಿಗಳು ಇದ್ದರು.