ಜಿಲ್ಲೆ

ರಸ್ತೆ ತಡೆಗೋಡೆಗೆ ಡಿಕ್ಕಿಯಾಗಿ ಮೂವರು ಸಾವು

ರೇಷ್ಮೆ ನಗರ ಡೆಸ್ಕ್

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ

ರಾಮನಗರ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭಾನುವಾರ ಮುಂಜಾನೆ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ, ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ - ಮಗ ಸೇರಿ ಮೂವರು ಮೃತಪಟ್ಟು ಓರ್ವ ತೀವ್ರವಾಗಿ ಗಾಯಗೊಂಡಿದ್ದಾರೆ.

ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಮಡುವಿನಕೋಡಿ ಗ್ರಾಮದ ತಮ್ಮಣ್ಣ ಗೌಡ (55), ಮುತ್ತುರಾಜ್ ಗೌಡ (27) ಸಚಿನ್ (27) ಮೃತರು. ಸಂಜು ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೆ.ಆರ್. ಪೇಟೆ ಮಡುವಿನಕೋಡಿ ಗ್ರಾಮದ ತಮ್ಮಣ್ಣಗೌಡ ಬೆಂಗಳೂರಿನ ಕೆಂಗೇರಿಯಲ್ಲಿ ಕೆಲಸ ಮಾಡಿಕೊಂಡು ಕುಟುಂಬ ಸಮೇತ ಅಲ್ಲಿಯೇ ವಾಸವಿದ್ದರು. ಸ್ವಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಚಾಲಕ ನಿದ್ರೆ ಮಂಪರಿನಲ್ಲಿದ್ದ ಕಾರಣ ಬೆಂಗಳೂರು - ಮೈಸೂರು ಹೆದ್ದಾರಿಯ ಜಯಪುರ ಸೇತುವೆ ಬಳಿ ಕಾರು ತಡೆಗೋಡೆಗೆ ಡಿಕ್ಕಿಯಾಗಿದೆ. ತಮ್ಮಣ್ಣಗೌಡ, ಮುತ್ತುರಾಜ್ ಕಾರು ಚಾಲಕ ಸಚಿನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತಮ್ಮಣ್ಣಗೌಡ ಅವರ ಬಾಮೈದ ಸಂಜು ಅವರಿಗೆ ತೀವ್ರವಾಗಿ ಪೆಟ್ಟಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.